ಚಿತ್ರದುರ್ಗ: ಲೋಕಸಭೆ ಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಸೋಲಿಗೆ ಬೆನ್ನು ತೋರಿಸಿ ಓಡಿ ಹೋಗಲ್ಲ. ಚಿತ್ರದುರ್ಗದಲ್ಲಿಯೇ ಮನೆ ಮಾಡಿ ಇಲ್ಲಿಯೇ ಇದ್ದು ಜನಸೇವೆ ಮಾಡುತ್ತೇನೆ ಎಂದು ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಆತಂಕ ನನಗಿಲ್ಲ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುತ್ತೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರರು ನೀಡಿದ ತೀರ್ಪಿಗೆ ತಲೆ ಬಾಗುತ್ತೇನೆ ಎಂದರು.
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್‌ನಲ್ಲಿರುವ ನಾನು ಸೋಲಿಗೆ ಹೆದರಿ ಓಡುವುದಿಲ್ಲ. ನಿರಂತರವಾಗಿ ಕ್ಷೇತ್ರದ ಜನರ ಜೊತೆಗಿರುತ್ತೇನೆ ಎಂದ ಚಂದ್ರಪ್ಪ, ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳವರಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತದನ್ವಯ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ವ್ಯಾಪಕ ಪ್ರಚಾರ ನಡೆಸಿದ್ದೇವೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲಿಯೂ ಅಪಸ್ವರವಿರಲಿಲ್ಲ. ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಜೆಡಿಎಸ್‌ನವರು ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನವರು ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ. ಆದರೆ ಲೋಕಸಭಾ ಚುನಾವಣೆ ಫಲಿತಾಂಶ ಏಕೆ ಹೀಗಾಯಿತು ಎನ್ನುವುದರ ಬಗ್ಗೆ ವರಿಷ್ಠರು ಚರ್ಚಿಸಿ ಆತ್ಮಾಲೋಕನ ಮಾಡಿಕೊಳ್ಳುತ್ತಾರೆ ಎಂದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಸಮುದಾಯಕ್ಕೆ ತೊಂದರೆಯಾದರೂ ಸಹಿಸುವುದಿಲ್ಲ. ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಚುನಾವಣೆಯಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರುಗಳಾದ ಡಿ. ಸುಧಾಕರ್, ಬಿ.ಜಿ. ಗೋವಿಂದಪ್ಪ ಹಾಗೂ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಎಲ್ಲ ಸಮುದಾಯದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದೇನೆ. ಕಳಂಕ ರಹಿತವಾಗಿ ಕೆಲಸ ಮಾಡಿರುವ ನೆಮ್ಮದಿಯಿದೆ ಎಂದು ಹೇಳಿದರು.
ಮಾಜಿ ಸಚಿವ ಎಚ್. ಆಂಜನೇಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರುಗಳಾದ ಡಿ. ಸುಧಾಕರ್, ಎ.ವಿ. ಉಮಾಪತಿ, ಜಿಪಂ ಸದಸ್ಯ ಡಾ| ಬಿ. ಯೋಗೇಶ್‌ಬಾಬು, ಪೌರಸೇವಾ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್, ಹನುಮಲಿ ಷಣ್ಮುಖಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಐದು ವರ್ಷಗಳ ಕಾಲ ನಿರೀಕ್ಷೆಗೂ ಮೀರಿ ಕೆಲಸ ಮಾಡಿರುವ ತೃಪ್ತಿ ನನಗಿದೆ. ಹಳ್ಳಿ ಹಳ್ಳಿ ಸುತ್ತಿ ಸರ್ಕಾರದ ಅನುದಾನ ತಲುಪಿಸುವಲ್ಲಿ ಸಫಲನಾಗಿದ್ದೇನೆ. ಆದರೂ ಮತದಾರ ಪ್ರಭು ತಿರಸ್ಕರಿಸಿರುವುದು ನೋವು ತಂದಿದೆ.
•
ಬಿ.ಎನ್. ಚಂದ್ರಪ್ಪ,ಮಾಜಿ ಸಂಸದರು.