ಚಿತ್ರದುರ್ಗ: ಜಿಲ್ಲೆಯಲ್ಲಿ ಫೆ. 8 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. 5458 ಪ್ರಕರಣಗಳನ್ನು ಗುರುತಿಸಲಾಗಿದ್ದು, ಸುಮಾರು 4500 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ. ವಟವಟಿ ತಿಳಿಸಿದರು.
ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅದಾಲತ್ ಮೂಲಕ ಪರಿಹರಿಸಿಕೊಳ್ಳಬಹುದು ಎಂದರು.
ಪ್ರಸಕ್ತ ಸಾಲಿನಲ್ಲಿ ಫೆ. 8, ಏಪ್ರಿಲ್ 11, ಜುಲೈ 11, ಸೆಪ್ಟೆಂಬರ್ 12 ಹಾಗೂ ಡಿಸೆಂಬರ್ 12 ಸೇರಿದಂತೆ ಒಟ್ಟು ಐದು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ 28,465 ಪ್ರಕರಣಗಳಲ್ಲಿ 5458 ಪ್ರಕರಣ ಹಾಗೂ 433 ವ್ಯಾಜ್ಯ ಪೂರ್ವ ಪ್ರಕರಣ ಸೇರಿದಂತೆ ಒಟ್ಟು 5891 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ಗೆ ವಹಿಸಲಾಗಿದೆ ಎಂದು ಹೇಳಿದರು.
2019ನೇ ಸಾಲಿನಲ್ಲಿ 4 ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 10,270 ಪ್ರಕರಣ ಹಾಗೂ 683 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿರುವ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನಕ್ಕೇರಿದೆ. ಈ ಬಾರಿ ಮರಳು ಸಾಗಾಣಿಕೆಗೆ ಸಂಬಂ ಧಿಸಿದ 250ಕ್ಕೂ ಹೆಚ್ಚು ಪ್ರಕರಣಗಳನ್ನು ಗುರುತಿಸಲಾಗಿದೆ. ಲಾರಿಯಲ್ಲಿ ಮರಳು ಸಾಗಾಣಿಕೆಗೆ 50 ಸಾವಿರ, ಟ್ರ್ಯಾಕ್ಟರ್‌ಗೆ 30 ಸಾವಿರ, ಗಾಡಿ 50 ಸಾವಿರ ಹಾಗೂ ಮೋಟಾರ್ ಸೈಕಲ್‌ನಲ್ಲಿ ಮರಳು ಸಾಗಾಣಿಕೆ ಮಾಡಿದವರಿಗೆ 3 ಸಾವಿರ ರೂ. ದಂಡ ವಿಧಿಸುವುದರ ಮೂಲಕ ಈ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು.
ಕಳೆದ ಎರಡ್ಮೂರು ವರ್ಷಗಳಿಂದ ಲೋಕ ಅದಾಲತ್ ಹೆಚ್ಚು ಜನಪ್ರಿಯವಾಗುತ್ತಿದೆ. ಜನತಾ ನ್ಯಾಯಾಲಯಗಳು ಇತ್ಯರ್ಥಗೊಳಿಸುವ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಲೋಕ ಅದಾಲತ್ ಕುರಿತು ಜಿಲ್ಲೆಯಾದ್ಯಂತ ತಾಲೂಕು ಮಟ್ಟದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.