Advertisement

ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ನ್ಯಾಯಸಮ್ಮತವಾಗಿ ನಡೆಸಿ

12:24 PM Jun 07, 2019 | Naveen |

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಜೂ. 8, 9 ಮತ್ತು 16 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ಪ್ರಥಮದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಸಂಬಂಧ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಪಿಎಸ್‌ಸಿ ವತಿಯಿಂದ ನಡೆಸಲಾಗುವ ಪ್ರದಸ, ದ್ವಿದಸ ಹುದ್ದೆಗಳ ನೇಮಕಾತಿ ಪರೀಕ್ಷೆ ಸಮರ್ಪಕವಾಗಿ ನಡೆಯಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು

ಯಶಸ್ವಿಗೊಳಿಸಬೇಕು. ಪರೀಕ್ಷೆಗೆ ಸಂಬಂಧ ಇಲ್ಲದವರನ್ನು ನಿಯಂತ್ರಿಸಿ ಸುಗಮವಾಗಿ ನಡೆಸಬೇಕು. ಸಮಯ ಪಾಲನೆಯೊಂದಿಗೆ ಕ್ರಮಬದ್ಧವಾಗಿ ಪರೀಕ್ಷೆ ನಡೆಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜೆ. ಆಂಥೋನಿ ಮಾತನಾಡಿ, ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಚಿತ್ರದುರ್ಗ ಮತ್ತು ಹಿರಿಯೂರು ನಗರಗಳಲ್ಲಿ ನಡೆಯಲಿದೆ. ಜೂ. 8 ರಂದು ಬೆಳಿಗ್ಗೆ 10 ರಿಂದ 11:30 ರವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಚಿತ್ರದುರ್ಗ ನಗರದ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 830 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂ. 9 ರಂದು ಬೆಳಿಗ್ಗೆ 10 ರಿಂದ 11:30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 3:30 ರವರೆಗೆ ಪ್ರ.ದ.ಸ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 8508 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

Advertisement

ಜೂ. 16 ರಂದು ಬೆಳಿಗ್ಗೆ 10 ರಿಂದ 11:30 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 3:30 ರವರೆಗೆ ದ್ವಿ.ದ.ಸ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಚಿತ್ರದುರ್ಗ ನಗರದ 26 ಹಾಗೂ ಹಿರಿಯೂರು ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಒಟ್ಟು 12,842 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರು, ಶೌಚಾಲಯ, ವ್ಯವಸ್ಥಿತ ಆಸನ ಸೌಲಭ್ಯ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಲಾಗುವುದು. ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿ 10 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಪ್ರತಿ 5 ವಿಕಲಚೇತನ ಅಭ್ಯರ್ಥಿಗಳಿಗೆ 1 ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೆಪಿಎಸ್‌ಸಿ ಪ್ರತಿನಿಧಿ ಮಹೇಶ್‌ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದ ಯಾವುದಾದರೂ ಗೊಂದಲಗಳಿದ್ದರೆ ಅಧಿಕಾರಿಗಳು ತಕ್ಷಣ ಕೆಪಿಎಸ್‌ಸಿ ಗಮನಕ್ಕೆ ತರಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜು, ಡಾ| ಕೆ.ಕೆ. ಕಾಮಾನಿ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

ಪ್ರವೇಶಪತ್ರದಲ್ಲಿ ಸೂಚಿಸಿರುವ ಪರೀಕ್ಷಾ ವೇಳಾಪಟ್ಟಿಯಂತೆ ಪರೀಕ್ಷೆ ಆರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹಾಜರಿರಬೇಕು. ಅಭ್ಯರ್ಥಿಗಳು ತಮ್ಮ ಪ್ರವೇಶಪತ್ರದೊಂದಿಗೆ ಕಡ್ಡಾಯವಾಗಿ ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಬ್ಯಾಂಕ್‌ ಪಾಸ್‌ಬುಕ್‌, ಡಿಎಲ್, ಪಾಸ್‌ಪೋರ್ಟ್‌, ಪ್ಯಾನ್‌ಕಾರ್ಡ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸಬೇಕು.
ಎ.ಜೆ. ಆಂಥೋನಿ,
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ

Advertisement

Udayavani is now on Telegram. Click here to join our channel and stay updated with the latest news.

Next