ಚಿತ್ರದುರ್ಗ: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಯುಸಿ ಇಂಗ್ಲೀಷ್ ಪರೀಕ್ಷೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಹರಡುವ ಭೀತಿಯಿಂದ ಲಾಕ್‌ಡೌನ್ ಜಾರಿಗೊಳಿಸಿದ್ದರ ಪರಿಣಾಮವಾಗಿ ಪಿಯು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯ ಪರೀಕ್ಷೆ ಬಾಕಿ ಉಳಿದಿತ್ತು. ಜೂ. 18 ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಸ್ಯಾನಿಟೈಸರ್, ಮಾಸ್ಕ್ ಬಳಕೆ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ವಿದ್ಯಾರ್ಥಿಗಳು ಕುಡಿಯುವ ನೀರಿನ ಬಾಟಲ್ ಅನ್ನು ಮನೆಯಿಂದಲೇ ತರುವಂತೆ ಸೂಚನೆ ನೀಡಬೇಕು. ಜ್ವರ ಕಂಡುಬರುವ ಅಥವಾ ಅಸ್ವಸ್ಥ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಲಭ್ಯ ಕಲ್ಪಿಸಬೇಕು. ಖಾಸಗಿ ಶಾಲಾ ಕಾಲೇಜುಗಳ ಬಸ್‌ಗಳ ಸೌಲಭ್ಯವನ್ನು ಕೂಡ ಸೇವೆಗೆ ಪಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಯಾವುದೇ ಗೊಂದಲಕ್ಕೆ ಈಡು ಮಾಡದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಚ್.ಸಿ ಶೋಭಾರಾಣಿ ಮಾತನಾಡಿ, ಜೂ. 18 ರಂದು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಕಾರಣಗಳಿಗಾಗಿ ಬೆಳಿಗ್ಗೆ 8:30 ರಿಂದಲೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು. ಜಿಲ್ಲೆಯ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದ್ದು ಒಟ್ಟು 15,512 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊರ ಜಿಲ್ಲೆಯ 820 ವಿದ್ಯಾರ್ಥಿಗಳೂ ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲಾ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಜ್ವರ ಇರುವ ಮಕ್ಕಳಿಗೆ ಮುಜಾಗ್ರತಾ ಕ್ರಮವಾಗಿ ಪ್ರತ್ಯಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದರು.