ಚಿತ್ರದುರ್ಗ: ಸ್ವಾತಂತ್ರ್ಯಾ ನಂತರ ದೇಶ ಗಣನೀಯ ಸಾಧನೆ ಮಾಡಿದೆ. ಮುಂದೆ ಸರ್ಕಾರದ ಸೌಲಭ್ಯಗಳು ಜನರ ಮನೆಬಾಗಿಲಿಗೆ ತಲುಪುವಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇಂದಿನ ಯುವ ಸಮೂಹ ಮತ್ತು ಮಕ್ಕಳು ಸಂವಿಧಾನದ ತತ್ವಗಳನ್ನು ಓದಿ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮತ್ತು ಪಾಲಿಸಬೇಕು. ಸಂವಿಧಾನ ಕೇವಲ ಸರ್ಕಾರದ ವಿಧಾನವಲ್ಲ, ಅದು ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರು. ಹಲವು ಭಾಷೆ, ಸಂಸ್ಕೃತಿ, ಧರ್ಮ, ಜಾತಿ, ಜನಾಂಗ ಹೊಂದಿರುವ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಸಂವಿಧಾನದ ಮೂಲಕ ನಮ್ಮೆಲ್ಲರನ್ನೂ ದೇಶ ಒಗ್ಗೂಡಿಸಿದೆ. ಭಾರತ ಕೃಷಿಯಲ್ಲಿ ಸ್ವಾವಲಂಬನೆ, ಕೈಗಾರಿಕೆಯಲ್ಲಿ ಸಫಲತೆ, ತಲಾ ಆದಾಯದಲ್ಲಿ ಏರಿಕೆ, ಶೈಕ್ಷಣಿಕ ಪ್ರಗತಿ, ಸಾರಿಗೆ ಸಂಪರ್ಕ, ತಂತ್ರಜ್ಞಾನ, ವಿಜ್ಞಾನ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿರಿಮೆ ಹೊಂದಿದೆ ಎಂದು ಬಣ್ಣಿಸಿದರು.
ಜಿಲ್ಲೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮೂಲ ಸೌಲಭ್ಯಗಳಾದ ಶಿಕ್ಷಣ, ರಸ್ತೆ, ಕುಡಿಯುವ ನೀರು, ಮಹಿಳಾ ಮಕ್ಕಳ ಅಭಿವೃದ್ಧಿ ಯೋಜನೆಗಳು ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸವಲತ್ತುಗಳನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ. ದೇಶದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಅಭಿವೃದ್ಧಿಯಲ್ಲಿ ಯುವ ಸಮೂಹದ ಕೊಡುಗೆ ಅಪಾರ. ದೇಶ ನನಗೇನು ನೀಡಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನನ್ನ ಕೊಡುಗೆ ಏನು ಎಂಬ ಮನೋಧರ್ಮವನ್ನು ಪಾಲಿಸುವುದು ಎಲ್ಲರ ಆದ್ಯ ಕರ್ತವ್ಯ. ಭಾರತದ ಸಂವಿಧಾನದ ಆಶೋತ್ತರಗಳಿಗೆ ಬದ್ಧರಾಗಿ ಅಭಿವೃದ್ಧಿಯ ಪಥದಲ್ಲಿ ಸಾಗೋಣ ಎಂದು ಕರೆ ನೀಡಿದರು.
ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಜಿಪಂ ಸಿಇಒ ಸಿ. ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ವೆಂಕಟೇಶಯ್ಯ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್, ಸಶಸ್ತ್ರ ಮೀಸಲು ಪಡೆ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳ ತಂಡದಿಂದ ಆಕರ್ಷಕ ಪಥ ಸಂಚಲನ ಜರುಗಿತು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ “ಮೇರಾ ಭಾರತ್ ಮಹಾನ್’ ನೃತ್ಯ ಗಮನ ಸೆಳೆಯಿತು. ರಾಕ್‌ಫೋರ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು “ಎಲ್ಲಾ ಮಾಯ, ನಾಳೆ ನಾವು ಮಾಯ’ ಎನ್ನುವ ಹಾಡಿನ ಮೂಲಕ ಉತ್ತಮ ಸಂದೇಶ ರವಾನಿಸಿದರು. ಚಿನ್ಮೂಲಾದ್ರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪುಲ್ವಾಮ ದಾಳಿ ಕುರಿತ ನೃತ್ಯ ರೂಪಕ ಪ್ರದರ್ಶಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳು ವಿವಿಧ ಗೀತೆಗಳಿಗೆ ಹೆಜ್ಜೆ ಹಾಕಿದರು.