ಚಿತ್ರದುರ್ಗ: ಜಿಲ್ಲೆಯ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಬುಧವಾರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಲಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಧನುರ್ವಾಯು, ಗಂಟಲು ಮಾರಿ ಹಾಗೂ ನಾಯಿಕೆಮ್ಮು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಎಲ್ಲಾ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಮಾತನಾಡಿ, ಡಿ.11 ರಿಂದ 31 ರವರೆಗೆ ಲಸಿಕಾ ಅಭಿಯಾನ ನಡೆಯಲಿದೆ. 5 ರಿಂದ 6 ವರ್ಷದ 38,785 ಮಕ್ಕಳಿಗೆ ಡಿಪಿಟಿ ಬೂಸ್ಟರ್ ಲಸಿಕೆ, 7 ರಿಂದ 16 ವರ್ಷದ 2,29,204 ಮಕ್ಕಳಿಗೆ ಟಿ.ಡಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಎಲ್ಲಾ ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ನೀಡುವ ಆರೋಗ್ಯ ಕಾರ್ಡ್, ಶಾಲಾ ಹಂತದಲ್ಲೂ ಮುಂದುವರೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಪಂ ಮುಖ್ಯ ಕಲಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಲಸಿಕೆ ನೀಡಿ ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಿ, ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಆಯಾ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಅನಂತ್, ತಾಲೂಕು ಪಂಚಾಯತ್ ಅಧ್ಯಕ್ಷ ಲಿಂಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್.ಎಲ್. ಪಾಲಾಕ್ಷ, ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ಎನ್.ಎಸ್. ಮಂಜುನಾಥ್, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜಯಣ್ಣ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.