ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿರುವುದನ್ನು ವಿರೋಧಿಸಿ ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಲ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
ಈ ನಡುವೆ ಮಸೂದೆ ತಿದ್ದುಪಡಿಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇಂದು ಹಿಂಸಾರೂಪವನ್ನು ತಾಳಿದೆ. ಇಲ್ಲಿನ ಸರಾಯ್ ಜೂಲಿಯಾನ ಹಾಗೂ ಮಥುರಾ ರಸ್ತೆಗಳಲ್ಲಿ ಪ್ರತಿಭಟನಾಕಾರರು ಎರಡು ಸರಕಾರಿ ಬಸ್ಸುಗಳಿಗೆ ಬೆಂಕಿ ಹಚ್ಚಿದ್ದಾರೆ.
ಇದೀಗ ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಅಗ್ನಿ ಶಾಮಕ ದಳ ವಾಹನವೊಂದನ್ನು ತಡೆಗಟ್ಟಿ ಅದಕ್ಕೆ ಹಾನಿ ಎಸಗಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಮೂಲಗಳು ಮಾಹಿತಿ ನೀಡಿವೆ. ಈ ಘಟನೆಯಲ್ಲಿ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವುದಾಗಿಯೂ ತಿಳಿದುಬಂದಿದೆ.
ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಮತ್ತು ಲಾಠೀ ಚಾರ್ಜ್ ಮಾಡಿದ್ದಾರೆ.
ಪ್ರತಿಭಟನೆಯ ಕಾರಣದಿಂದ ಓಕ್ಲಾ ಅಂಡರ್ ಪಾಸ್ ನಿಂದ ಸರಿತಾ ವಿಹಾರ್ ವರೆಗಿನ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ದೆಹಲಿ ಸಂಚಾರಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.