ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡನೆ ಮಾಡುವ ಮುನ್ನವೇ ಗುವಾಹಟಿ, ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಐದು ಸಾವಿರ ಸೇನಾಪಡೆಯನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಅಸ್ಸಾಂ, ಗುವಾಹಟಿ, ತ್ರಿಪುರಾಗಳಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿರುವುದನ್ನು ಮನಗಂಡ ಕೇಂದ್ರ ಸರ್ಕಾರ ಬೆಳಗ್ಗೆ 140 ಯೋಧರನ್ನು ಕಳುಹಿಸಿತ್ತು. ಆದರೆ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಐದು ಸಾವಿರ ಯೋಧರನ್ನು ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ.
ಅಸ್ಸಾಂ ಸರ್ಕಾರ ಈಗಾಗಲೇ ಮೊಬೈಲ್ ಹಾಗೂ ಇಂಟರ್ನೆಟ್ ಸೇವೆಯನ್ನು ಸುಮಾರು ಹತ್ತು ಜಿಲ್ಲೆಗಳಲ್ಲಿ ಕಡಿತಗೊಳಿಸಿದೆ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.
ಪ್ರಸ್ತಾಪಿತ ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರ ವಲಸಿಗ ನಿರಾಶ್ರಿತರಿಗೆ ಭಾರತದಲ್ಲಿ ಕಾಯಂ ಪೌರತ್ವ ನೀಡುವುದು ಇದರ ಉದ್ದೇಶವಾಗಿದೆ. ಗುವಾಹಟಿಯಲ್ಲಿ ಪ್ರತಿಭಟನಾನಿರತ ನೂರಾರು ಮಂದಿಯನ್ನು ಬಂಧಿಸಲಾಗಿದೆ.
ಪ್ರತಿಭಟನೆಯ ತೀವ್ರಗೊಂಡ ನಿಟ್ಟಿನಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದಾ ಸೋನೋವಾಲ್ ಗುವಾಹಟಿ ವಿಮಾನ ನಿಲ್ದಾಣದಲ್ಲಿಯೇ ಕೆಲಕಾಲ ಕಳೆಯುವಂತಾಗಿತ್ತು. ಕೊನೆಗೆ ಬಿಗಿ ಭದ್ರತೆಯಲ್ಲಿ ನಗರದ ಮೂಲಕ ಮುಖ್ಯಮಂತ್ರಿಯನ್ನು ನಿವಾಸಕ್ಕೆ ಕರೆತರಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.