ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಬೆಂಬಲ ಕಾಂಗ್ರೆಸ್‌ಗೆ ದೊರಕುವಂತೆ ಮಾಡಿ ಹೆಚ್ಚು ಶಾಸಕರು ಆಯ್ಕೆಯಾದರೆ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಮಂಡಿಸಲು ಕಾರ್ಯತಂತ್ರ ರೂಪಿಸಲಾಗಿದೆ.
ಹೀಗಾಗಿಯೇ ವೀರಶೈವ ಲಿಂಗಾಯಿತ ಸಮುದಾಯಕ್ಕೆ 50 ರಿಂದ 60 ಟಿಕೆಟ್ ನೀಡಬೇಕು ಎಂಬ ಬೇಡಿಕೆ ಸಮುದಾಯದ ನಾಯಕರು ಕಾಂಗ್ರೆಸ್ ಹೈಕಮಾಂಡ್ ಮುಂದಿಟ್ಟಿದ್ದಾರೆ.
ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯಿಂದ ಬಿಜೆಪಿಯಲ್ಲಿ ಲಿಂಗಾಯಿತರಿಗೆ ಮತ್ತೆ ಮುಖ್ಯಮಂತ್ರಿ ಮಾಡುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಇದರ ಲಾಭ ಪಡೆಯಲು ಇದೀಗ ಕಾಂಗ್ರೆಸ್‌ನಲ್ಲಿರುವ ವೀರಶೈವ ಲಿಂಗಾಯಿತ ಮುಖಂಡರು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಉತ್ತರ ಕರ್ನಾಟಕ ಭಾಗಕ್ಕೆ ಮಾತ್ರ ವೀರಶೈವ ಲಿಂಗಾಯಿತರಿಗೆ ಟಿಕೆಟ್ ಸೀಮಿತಗೊಳಿಸದೆ ಹಳೇ ಮೈಸೂರು ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಸಹ ಹೈಕಮಾಂಡ್ ಮುಂದಿಡಲು ತೀರ್ಮಾನಿಸಲಾಗಿದೆ. ಈ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಅಲ್ಲಂ ವೀರಭದ್ರಪ್ಪ ಸೇರಿ ಎಲ್ಲ ನಾಯಕರು ಒಗ್ಗಟ್ಟು ಕಾಯ್ದುಕೊಂಡಿದ್ದಾರೆ.
ಇದೇ ಕಾರಣಕ್ಕೆ ಕಾಂಗ್ರೆಸ್‌ನಲ್ಲಿರುವ ವೀರಶೈವ ಲಿಂಗಾಯಿತ ಮುಖಂಡರು ಸರಣಿ ಸಭೆ ನಡೆಸಿ ಒಗ್ಗಟ್ಟು ಕಾಯ್ದುಕೊಂಡು ಹೈಕಮಾಂಡ್ ಮೇಲೆ ಒತ್ತಡ ಹಾಕಿ ಹೆಚ್ಚು ಟಿಕೆಟ್ ಪಡೆಯಲು ಪ್ರಯತ್ನಿಸಬೇಕು. ನಮ್ಮ ಸಮುದಾಯದ ಶಾಸಕರು ಹೆಚ್ಚಾಗಿ ಗೆದ್ದರೆ ಮುಂದೆ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡಲು ಸಹಕಾರಿಯಾಗುತ್ತದೆ.
ಈಗಾಗಲೇ ಕಾಂಗ್ರೆಸ್‌ನಲ್ಲಿ ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿ ಬಿಂಬಿತರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾದರೆ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಅವರ ಹೆಸರುಗಳೂ ಮುಂಚೂಣಿಗೆ ಬರಬಹುದು.
ಅಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯಿತ ಸಮುದಾಯದಿಂದಲೂ ಬೇಡಿಕೆ ಇಡಬಹುದು. ಆದರೆ, ನಮ್ಮ ಶಾಸಕರ ಸಂಖ್ಯೆ ಹೆಚ್ಚಾಗಿದ್ದಾಗ ಮಾತ್ರ ಅದಕ್ಕೆ ಬೆಲೆ ಸಿಗಲಿದೆ ಎಂದು ಸಭೆಯಲ್ಲಿ ಚರ್ಚೆಯಾಯಿತು ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ನೇಮಕಗೊಂಡಿದ್ದು ,ಉತ್ತರ ಕರ್ನಾಟಕ ಭಾಗಕ್ಕೆ ಕಾಂಗ್ರೆಸ್‌ನಿಂದ ಈ ಬಾರಿ ಮುಖ್ಯಮಂತ್ರಿ ಅವಕಾಶ ಕೊಡಬೇಕು ಎಂಬ ಒತ್ತಾಯವೂ ಇರುವುದರಿಂದ ಮುಖ್ಯಮಂತ್ರಿ ರೇಸ್‌ನಲ್ಲಿ ವೀರಶೈವ ಲಿಂಗಾಯಿತ ಸಮುದಾಯವೂ ಸೇರ್ಪಡೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.