ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿದೆ. ಮುಖ್ಯಮಂತ್ರಿ ಹೊರತುಪಡಿಸಿ 26 ಸಚಿವರು ಮಾತ್ರ ಇರುವುದರಿಂದ ನಾಲ್ವರು ಸಚಿವರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ತವರು ಜಿಲ್ಲೆ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ವಹಿಸಿದ್ದರೆ, ಡಿ.ಕೆ.ಶಿವಕುಮಾರ್ ಅವರಿಗೆ ರಾಮನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಸಿಎಂ ಕುಮಾರ ಸ್ವಾಮಿ ಅವರು ಇದೇ ಜಿಲ್ಲೆಯ ಚೆನ್ನಪಟ್ಟಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಉಭಯ ನಾಯಕರ ಹೊಂದಾಣಿಕೆಗೆ ಮತ್ತಷ್ಟು ಬಲ ಬಂದಂತಾಗಿದೆ. ಅದೇ ರೀತಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಉತ್ತರ ಕನ್ನಡ ಮತ್ತು ಧಾರವಾಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣಬೈರೇಗೌಡ ಅವರಿಗೆ ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.
ಇನ್ನು ಖಾತೆಗಳ ಹಂಚಿಕೆಯಲ್ಲಿ ಅಸಮಾಧಾನಗೊಂಡಿದ್ದ ಜಿ.ಟಿ.ದೇವೇಗೌಡ ಮತ್ತು ಸಿ.ಎಸ್. ಪುಟ್ಟರಾಜು ಅವರಿಗೆ ತವರು ಜಿಲ್ಲೆಯ ಉಸ್ತುವಾರಿ
ವಹಿಸಲಾಗಿದೆ. ಉನ್ನತ ಶಿಕ್ಷಣ ಖಾತೆ ಸಿಕ್ಕಿದ್ದರಿಂದ ಜಿ.ಟಿ.ದೇವೇಗೌಡ ಮತ್ತು ಸಣ್ಣ ನೀರಾವರಿ ಖಾತೆ ಸಿಕ್ಕಿದ್ದರಿಂದ ಸಿ.ಎಸ್.ಪುಟ್ಟರಾಜು ಬೇಸರಗೊಂಡಿದ್ದರು. ಈ ಸಂದರ್ಭದಲ್ಲಿ ತವರು ಜಿಲ್ಲೆಯ ಉಸ್ತುವಾರಿ ನೀಡುವುದಾಗಿ ಭರವಸೆ ನೀಡುವ ಮೂಲಕ ಅವರನ್ನು ಸಮಾಧಾನಪಡಿಸಲಾಗಿತ್ತು.