Advertisement

ಮಳೆಯಿಂದ ಹಾನಿಯಾದ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಿ : ಅಧಿಕಾರಿಗಳಿಗೆ ಸಿಎಂ ಸೂಚನೆ

06:12 PM Aug 17, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಬಳಕೆ ಮಾಡುವಂತೆ ಸೂಚಿಸಿದರು.

ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಸಾಂದ್ರತೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ :ಅವಧಿ ಮುಗಿದು 2 ವರ್ಷದ ನಂತರ ತರೀಕೆರೆ ಪುರಸಭೆಗೆ ಚುನಾವಣೆ

Advertisement

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಚಿಂತನೆ :

ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸಲಹೆ ನೀಡಲಾಯಿತು.

ಈ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಯಿತು. ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಸಲಹೆ ನೀಡಲಾಯಿತು. ರಾಜ್ಯದ ಜಿ ಇ ಆರ್ (Gross Enrollment Ratio) ಶೇ. 32 ರಷ್ಟು ಇದ್ದು, ಮುಂದಿನ ದಿನಗಳಲ್ಲಿ ಇದನ್ನು ಶೇ. 50 ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಎಡ್., ಡಿ.ಎಡ್. ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಇದನ್ನೂ ಓದಿ :ಮೂಲ ವಿಜ್ಞಾನ ಕಲಿಕೆಗೆ ಉತ್ತೇಜನ, ವೈಜ್ಞಾನಿಕ ಸಂಸ್ಕಾರಕ್ಕೆ ಒತ್ತು : ಸಚಿವ ಅಶ್ವತ್ಥನಾರಾಯಣ

ಗ್ರಾಮೀಣ ವಸತಿ ಯೋಜನೆ: ತ್ವರಿತವಾಗಿ ಫಲಾನುಭವಿಗಳ ವಿವರ ದಾಖಲಿಸಲು ಸೂಚನೆ

ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್ ಪಿ- 1.8 ಲಕ್ಷ ಮನೆಗಳು ಕಾಮಗಾರಿ ಪ್ರಾರಂಭವಾಗಿಲ್ಲ. ಈ ಯೋಜನಗೆ ಎಸ್ ಸಿ ಎಸ್ ಪಿ/ ಟಿಎಸ್ ಪಿ, ಹಿಂದುಳಿದ ವರ್ಗಗಳು ಹಾಗೂ ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಗಳ ಯೋಜನೆಗಳಡಿ ಪಡೆದುಕೊಂಡು, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣಾರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next