ಕಾಪು: ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಿರ್ಮಾಣಗೊಳ್ಳಲಿರುವ ಅದಮಾರು ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅ.13 ರಂದು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಬದುಕಿನಲ್ಲಿ ಪೂರ್ಣತೆಯನ್ನು ಸಾಧಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರಿಪೂರ್ಣ ಸುಶಿಕ್ಷಿತರನ್ನಾಗಿಸುವಲ್ಲಿ ಅದಮಾರು ಮಠದ ವತಿಯಿಂದ ನಿರ್ವಹಿಸಲ್ಪಡುತ್ತಿರುವ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಅದಮಾರು ಮಠ ಮತ್ತು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಬ್ರಾಂಡಿಂಗ್ ಆಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅದಮಾರು ಮಠದ ಯತಿಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಕ್ತವಾಗಿ ಸ್ವಾಗತಿಸುವ ಮೂಲಕ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಸ್ಪಂಧಿಸೋಣ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ಶಿಕ್ಷಣವೆಂಬ ಮಹಾಯಜ್ಞವನ್ನು ಸಧೃಡಗೊಳಿಸುತ್ತಿರುವ ಶ್ರಮಜೀವಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನ ಶ್ಲಾಘನೀಯ ಎಂದರು.
ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಅದಮಾರು ಮಠದ ಹಿರಿಯ ಯತಿಗಳಾದ ಶ್ರೀ ವಿಬುಧೇಶ ತೀರ್ಥ ಶ್ರೀಪಾದರು ಗ್ರಾಮೀಣ ಭಾಗದ ಯುವ ಜನರನ್ನು ಸುಶಿಕ್ಷಿತರನ್ನಾಗಿಸುವ ಉದ್ದೇಶ ದೊಂದಿಗೆ ಆರಂಭಿಸಿದ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆ ಗಳು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಕಾಪು ಕ್ಷೇತ್ರಕ್ಕೆ ಹೆಮ್ಮೆಯ ನ್ನು ಉಂಟು ಮಾಡಿದೆ ಎಂದರು.
ಇಲ್ಲಿಗೆ ಬರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ರೈಲ್ವೇ ಟ್ರ್ಯಾಕ್ ನ ಬದಲಿಗೆ ಓವರ್ ಬ್ರಿಡ್ಜ್ ನಿರ್ಮಾಣ ಕ್ಕೆ ಪ್ರಸ್ತಾವನೆ ಸಲ್ಲಿಸಿದರು.
ಸಚಿವರಾದ ಸುನಿಲ್ ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್, ತೆಂಕ ಗ್ರಾ.ಪಂ ಅಧ್ಯಕ್ಷೆ ಕಸ್ತೂರಿ ಪ್ರವೀಣ್, ಅದಮಾರು ಮಠ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಕೆ. ಶ್ರೀಹರಿ ಬೆಂಗಳೂರು, ಆಡಳಿತ ಸಮಿತಿ ಕಾರ್ಯದರ್ಶಿ ಪ್ರದೀಪ್ ರಾವ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅದಮಾರು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ, ಉಪ ಪ್ರಾಂಶುಪಾಲೆ ಒಲ್ವಿಟಾ ಡಿ ಸೋಜ, ವಿವಿಧ ಸಂಸ್ಥೆಗಳ ಮುಖ್ಯಸ್ಥರಾದ ಡಾ. ರಾಘವೇಂದ್ರ ಎ., ಡಾ. ಪ್ರಕಾಶ್ ರಾವ್, ಪ್ರತಿಮಾ ಬಾಳಿಗಾ, ಗುರುರಾಜ್, ವೆಂಕಟರಮಣ ಮುಚ್ಚಿಂತಾಯ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೊಲೀಸ್ ಅಧೀಕ್ಷಕ ಡಾ. ವಿಷ್ಣುವರ್ಧನ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ನಾಯಕ್, ಉದಯ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಶಿವಪ್ರಸಾದ್ ಶೆಟ್ಟಿ, ಮಿಥುನ್ ಹೆಗ್ಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭುವಾನಾಭಿರಾಮ ಉಡುಪ ಮೊದಲಾದವರು ಉಪಸ್ಥಿತರಿದ್ದರು.
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಸಮಿತಿಯ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ರಾಮಕೃಷ್ಣ ಪೈ ವಂದಿಸಿದರು. ಉಪನ್ಯಾಸಕ ಜಯಶಂಕರ್ ಕಣ್ಣಂಗಾರು ಕಾರ್ಯಕ್ರಮ ನಿರೂಪಿಸಿದರು.