ರಬಕವಿ-ಬನಹಟ್ಟಿ: ಇದೇ 26 ರಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬನಹಟ್ಟಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಆಗಮಸಲಿದ್ದಾರೆ, ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.
ಶುಕ್ರವಾರ ಇಲ್ಲಿನ ಎಸ್‌ಆರ್‌ಎ ಪಿಯು ಕಾಲೇಜಿನಲ್ಲಿ ಸುದ್ದಿಗಾಗರರೊಂದಿಗೆ ಮಾತನಾಡುತ್ತ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಅವರ ಕರ್ತವ್ಯಗಳನ್ನು ನಿರ್ವಹಿಸಲು ತಿಳಿಸಲಾಗಿದೆ ಎಂದರು.
ದಿ. 26 ರಂದು ಬನಹಟ್ಟಿಗೆ ಆಗಮಿಸಿದ ನಂತರ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗ್ರಾಮದಲ್ಲಿ ರೂ. 1 ಕೋಟಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ನಂತರ ಬನಹಟ್ಟಿ ಎಸ್‌ಆರ್‌ಎ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣ ಪತ್ರ ಮತ್ತು ಸನ್ಮಾನ ಕಾರ್ಯಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳು ವೇದಿಕೆಯ ಸ್ಥಳ, ವಾಹನಗಳ ಪಾರ್ಕಿಂಗ್, ನಿರೀಕ್ಷಣಾ ಮಂದಿರ, ಹೆಲಿಪ್ಯಾಡ್ ಗಳ ವೀಕ್ಷಣೆ ಮಾಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಎಸ್.ಪಿ. ಜಯಪ್ರಕಾಶ, ಡಿವೈಎಸ್ಪಿ ಶಾಂತವೀರ ಇ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ್ ಡಾ.ಡಿ.ಎಚ್.ಹೂಗಾರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಸಂಜೀವ ಹಿಪ್ಪರಗಿ, ಸಿಪಿಐ ಸುನೀಲ ಪಾಟೀಲ, ಪಿಎ ರಾಘವೇಂದ್ರ ಖೋತ, ಗ್ರೇಡ್-೨ ತಹಶೀಲ್ದಾರ್ ಎಸ್.ಬಿ.ಕಾಂಬಳೆ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಚ್.ಗಲಗಲಿ, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎನ್.ಎಚ್.ನದಾಫ್. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸನ್ನವರ, ಸಿಡಿಪಿಒ ಸುನಂದಾ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: ಪಕ್ಷದ ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳಿಗೆ ಕಾಂಗ್ರೆಸ್ ಅಂಗೀಕಾರ