ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟಂಬರ್ ಎರಡನೇ ವಾರದಲ್ಲಿ ಮತ್ತೆ ದೆಹಲಿಗೆ ತೆರಳಲು ನಿರ್ಧರಿಸಿದ್ದು, ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆಯ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಸೆಪ್ಟಂಬರ್ 7 ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಳೆದ ವಾರ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ವಯಕ್ತಿಕ ಕಾರಣದಿಂದ ಸಿಎಂಗೆ ಭೇಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಂದಿನ ವಾರ ದೆಹಲಿಗೆ ತೆರಳಿ ಭೇಟಿ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದ್ದು, ಅದರಲ್ಲಿ ಮೂರು ಸ್ಥಾನಗಳನ್ನು ಭರ್ತಿ ಮಾಡಿ, ಒಂದು ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಸೆಪ್ಟಂಬರ್ 13 ರಿಂದ ಆರಂಭವಾಗುವ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡುವ ಚಿಂತನೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಪತಿಯಿಂದ ದೂರ ಇರಲು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ನಿರ್ಧಾರ ?
ಅಮಿತ್ ಶಾ, ರಾಜನಾಥ ಸಿಂಗ್ ರಾಜ್ಯಕ್ಕೆ ಆಗಮನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸೆಪ್ಟಂಬರ್ 2 ಮತ್ತು 3 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸೆಪ್ಟಂಬರ್ 2 ರಂದು ಅಮಿತ್ ಶಾ ದಾವಣಗೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜನಾಥ ಸಿಂಗ್ ಕಾರವಾರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.