ಕಾಪು : ಅತ್ಯಂತ ಪ್ರಾಚೀನ ಪರಂಪರೆಯನ್ನು ಹೊಂದಿರುವ ಕಾಪು ಮಾರಿಯಮ್ಮ ದೇವಸ್ಥಾನದಲ್ಲಿ ಎಲ್ಲಾ ಸಮುದಾಯಗಳ ಸಹಭಾಗಿತ್ವದೊಂದಿಗೆ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಇದು ರಾಜ್ಯಕ್ಕೇ ಮಾದರಿಯಾಗುವ ಧಾರ್ಮಿಕ ಕ್ಷೇತ್ರವಾಗಿ ಮೂಡಿಬರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅ. 13 ರಂದು ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಥಮ ಹಂತದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು, ಜೀರ್ಣೋದ್ಧಾರ ಕಾರ್ಯಗಳಿಗೆ 99 ಶೀಲಾ ಸೇವೆ ಸಮರ್ಪಸಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪುನರುತ್ಥಾನ ಯೋಜನೆಗಳಿಗೆ ಮುಜರಾಯಿ ಇಲಾಖೆಯಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲು ಕ್ರಮ ವಹಿಸಲಾಗುವುದು. ದೇವಿಯ ಜೀರ್ಣೋದ್ದಾರ ಕಾರ್ಯಕ್ಕೆ ಯಾವುದೇ ಅಡೆ ತಡೆ ಬಾರದೆ ಸಾಂಗವಾಗಿ ನೆರವೇರವಂತಾಗಲು ಸರಕಾರದ ಪೂರ್ಣ ಸಹಕಾರ ನೀಡಲಾಗುವುದು ಎಂದರು.
ಕಾಪು ಶಾಸಕ / ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿ| ಎಸ್.ಆರ್. ಬೊಮ್ಮಾಯಿ ಅವರು ಭೇಟಿ ನೀಡಿದ್ದರು. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಿತವಾಗಿ ಐದು ಮಂದಿ ಮುಖ್ಯಮಂತ್ರಿಗಳು ಭೇಟಿ ನೀಡಿದ್ದು ಇಲ್ಲಿನ ಜೀರ್ಣೋದ್ಧಾರ ಕಾರ್ಯಗಳಿಗೆ ಸರಕಾರದ ವತಿಯಿಂದಲೂ ಹೆಚ್ಚಿನ ಆರ್ಥಿಕ ಸಹಕಾರ ನಿರೀಕ್ಷಿಸಲಾಗುತ್ತಿದೆ. ಸ್ವತಃ ಮುಖ್ಯಮಂತ್ರಿಗಳೇ ಬಂದು ಕಾಮಗಾರಿ ವೀಕ್ಷಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಿವೆ ಎಂದರು.
ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಅವರು ಸುಮಾರು 35 ಕೋಟಿ ರೂಪಾಯಿ ವೆಚ್ಚದೊಂದಿಗೆ ನಡೆಯಲಿರುವ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದ ವತಿಯಿಂದ 19 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸುವಂತೆ ಸಮಿತಿಯ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ವಿ. ಸುನೀಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶ್ರೀಕಾಂತ್ ನಾಯಕ್, ಉದಯ ಕುಮಾರ್ ಶೆಟ್ಟಿ, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ತಂತ್ರಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ್ ತಂತ್ರಿ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿ ಪ್ರದಾನ ಸಂಚಾಲಕ ಯೋಗೀಶ್ ಶೆಟ್ಟಿ, ಸಮಿತಿಯ ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ಮನೋಹರ್ ಎಸ್. ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಗೌರವ ಸಲಹೆಗಾರರಾದ ನಡಿಕೆರೆ ರತ್ನಾಕರ ಶೆಟ್ಟಿ, ವಿಕ್ರಂ ಕಾಪು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಕಾಪು ಸಾವಿರ ಸೀಮೆಯ ಭಗವದ್ಭಕ್ತರು ಉಪಸ್ಥಿತರಿದ್ದರು.