Advertisement

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಿ: ಸಿದ್ದರಾಮಯ್ಯ

03:34 PM Aug 13, 2021 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು. ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Advertisement

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿ ನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದಿದ್ದಾರೆ.

‘ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ಕುವೆಂಪು ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ. ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯವನ್ನಾಗಲಿ, ರಾಜಿಯನ್ನಾಗಲಿ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು. ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಡುವುದನ್ನು ಕೇಂದ್ರ ಬಿಜೆಪಿ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ರೀತಿಯಲ್ಲಿ ಇಲ್ಲಿಯೂ ರಾಜಕೀಯ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ. ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ ಎಂದಿದ್ದಾರೆ.

Advertisement

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ವಿರೋಧ ಸಲ್ಲದು.  ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಅನುಭವಿಸಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next