ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ, ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಕೂಡ ಬೆಳಗಾವಿ, ಹುಬ್ಬಳ್ಳಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಇದುವರೆಗೆ ನಡೆದ ಚುನಾವಣೆ ಪ್ರಚಾರ ನೋಡಿದರೆ ನಮ್ಮ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದರು.
ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಇದೀಗ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಿದೆ. ಆದರೂ ಜಾಗೃತರಾಗಿರಬೇಕೆಂದು ಸೂಚನೆ ನೀಡಿದ್ದೇವೆ. ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಪಿಐಯನ್ನು ಉಸ್ತುವಾರಿ ಮಾಡಲಾಗಿದೆ. ಅವರು ಪರಿಸ್ಥಿತಿ ಸರಿಯಾಗಿ ನಿಭಾಯಿಸಲು ತಿಳಿಸಲಾಗಿದೆ. ಎಲ್ಲ ಸಮುದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್-ಜೆಡಿಎಸ್ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ
ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ನಡೆದಿರುವುದು ದುರದೃಷ್ಟಕರ. ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ ಎಂದರು.
ಉತ್ತರ ಪ್ರದೇಶದಂತ ಘಟನೆಗಳು ನಮ್ಮಲ್ಲಿ ನಡೆದಿಲ್ಲ, ನಮ್ಮ ರಾಜ್ಯ ಶಾಂತವಾಗಿದೆ. ಶೂಟ್ ಆ್ಯಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದರು.
ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದರು.