Advertisement
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ವರಿಷ್ಢರ ಭೇಟಿಗೆ ಇನ್ನೂ ಸಮಯಾವಕಾಶ ನಿಗದಿಯಾಗದೆ ಇರುವುದು ಕುತೂಹಲ ಸೃಷ್ಟಿಸಿದೆ.
Related Articles
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುತ್ತಿರುವುದು ಸಹಜವಾಗಿ ಸಂಪುಟ ವಿಸ್ತರಣೆ/ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳು ಮತ್ತೆ ಕಣ್ಣರಳಿಸಿ ಕೂಡುವಂತೆ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಪುನಾರಚನೆ ಕುರಿತು ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದರು.
ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರ್ನಾಲ್ಕು ದಿನಗಳಲ್ಲಿ ಸಂಪುಟ ಪುನಾರಚನೆಯಾಗುವ ವಿಶ್ವಾಸ ಇದೆ ಎಂದಿದ್ದರು.
ಒಂದು ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಈ ಬಾರಿಯ ಸಿಎಂ ದೆಹಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪಕ್ಷ ಸೇರ್ಪಡೆ ಚರ್ಚೆ ಸಾಧ್ಯತೆ: ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಭೇಟಿಯಾದರೆ, ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಲು ಅನೇಕ ನಾಯಕರು ಸಂಪರ್ಕ ಮಾಡುತ್ತಿದ್ದು, ಅಂತಹ ನಾಯಕರುಗಳ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.