ಬೆಂಗಳೂರು: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಅಂಗೀಕರಿಸಿದ್ದು, ರಾಜ್ಯಪಾಲರಿಗೆ ಪತ್ರವನ್ನು ರವಾನಿಸಿದ್ದಾರೆ.
1 ವರ್ಷ 25 ದಿನ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ, ಸಿ.ಡಿ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.
ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರ. ಈ ಬಗ್ಗೆ ಶೀಘ್ರವೇ ತನಿಖೆ ಆಗಬೇಕು. ನಾನು ನಿರ್ದೋಷಿಯಾಗುವ ವಿಶ್ವಾಸವಿದ್ದರೂ, ನಾನು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಇದನ್ನು ಅಂಗೀಕರಿಸಿ ಎಂದು ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದರು.
ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಹೋದರ ಬಾಲಚಂದ್ರ ಜಾರಕಿಹೊಳಿ, ಸಿಎಂ ಬಿಎಸ್ ವೈ ಕಾವೇರಿ ನಿವಾಸಕ್ಕೆ ತಲುಪಿಸಿದ್ದರು.
ಇದನ್ನೂ ಓದಿ: ಸಿ.ಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ
ರಮೇಶ್ ಜಾರಕಿಹೊಳಿ ತಮ್ಮ ಮೇಲೆ ಬಂದ ಆಪಾದನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡಬೇಕು. ತನಿಖೆ ಆಗಲಿ ಅಂತ ಅವರು ಹೇಳಿದ್ದಾರೆ. ಸತ್ಯಾಸತ್ಯತೆ ಹೊರಗೆ ಬಂದ ಬಳಿಕ ಕಾನೂನು ಪ್ರಕ್ರಿಯೆ ನಡೆಯುತ್ತದೆ. ಆಪಾದನೆ ಬಂದ ತಕ್ಷಣ ಅವರು ಆರೋಪಿಯಲ್ಲ, ಅದು ಆಪಾದನೆ ಆಗುತ್ತದಷ್ಟೇ ಎಂದು ಸಚಿವ ಬಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನ ಸಿಎಂ ಬಿಎಸ್ ವೈ ಅಂಗೀಕಾರ ಮಾಡಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನ ಕಳುಹಿಸಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಇದನ್ನೂ ಓದಿ: ತೆರಿಗೆ ವಂಚನೆ ಆರೋಪ; ನಟಿ ತಾಪ್ಸಿ, ಅನುರಾಗ್ ಕಶ್ಯಪ್ ನಿವಾಸದ ಮೇಲೆ ಐಟಿ ದಾಳಿ
ಏತನ್ಮಧ್ಯೆ ಗೋಕಾಕ್ ಪಟ್ಟಣ ಬಂದ್ ಗೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕರೆ ನೀಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಬಲಿಗರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ