Advertisement

ಪೊಲೀಸ್‌ ಇಲಾಖೆ ಆಧುನೀಕರಣಕ್ಕೆ ಆದ್ಯತೆ : ಸಿಎಂ ಬಿಎಸ್‌ವೈ

10:15 PM Apr 02, 2021 | Team Udayavani |

ಬೆಂಗಳೂರು: ರಾಜ್ಯ ಪೊಲೀಸರ ಕ್ಷೇಮಾಭಿವೃದ್ಧಿ ಜತೆಗೆ ಇಲಾಖೆಯ ಅತ್ಯಾಧುನೀಕರಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಪೊಲೀಸ್‌ ಧ್ವಜಾ ದಿನಾಚರಣೆ ಅಂಗವಾಗಿ ಶುಕ್ರವಾರ ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್‌ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಪೊಲೀಸರ ಕ್ಷೇಮಾಭಿವೃದ್ಧಿಗೆ ಮತ್ತು ಪೊಲೀಸ್‌ ವ್ಯವಸ್ಥೆ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪೊಲೀಸರ ಗೃಹ-2025 ಯೋಜನೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚಾಲನೆ ನೀಡಿದ್ದು, ಯೋಜನೆ ಅಡಿಯಲ್ಲಿ ಅಧಿಕಾರಿ-ಸಿಬ್ಬಂದಿಗೆ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ 10,0034 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ. ಜತೆಗೆ ಸ್ವಂತ ಕಟ್ಟಡ ಇಲ್ಲದ ರಾಜ್ಯದ 100 ಠಾಣೆಗಳಿಗೆ ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ.ಕೊಡಲಾಗುತ್ತದೆ.

ಪೊಲೀಸ್‌ ಅಧಿಕಾರಿ-ಸಿಬ್ಬಂದಿ ಆರೋಗ್ಯಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಒಟ್ಟು 110 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ನಿವೃತ್ತ ಪೊಲೀಸ್‌ ಅಧಿಕಾರಿ-ಸಿಬ್ಬಂದಿಗಾಗಿ 20 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, 7.5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ಇದನ್ನೂ ಓದಿ :10 ಮತ್ತು 12ನೇ ತರಗತಿ ಪರೀಕ್ಷೆ ಸುತ್ತೋಲೆ ಗೊಂದಲಕ್ಕೆ ಸಿಬಿಎಸ್‌ಇ ತೆರೆ

Advertisement

ಹಾವೇರಿ ಜಿಲ್ಲೆಯ ಶಿಗ್ಗಾಂವ್‌ ತಾಲೂಕಿನಲ್ಲಿ ಕೆಎಸ್ಆರ್‌ಪಿ ಕಟ್ಟಡಕ್ಕೆ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್‌ ಕಚೇರಿ ಸಂಕೀರ್ಣ ನಿರ್ಮಾಣ ಮಾಡಲಾಗುತ್ತದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಕರಾವಳಿ ಪ್ರದೇಶ ಬಲಪಡಿಸಲು ಕ್ರಮಕೈಗೊಂಡಿದ್ದು, ಮಹಿಳೆಯರ ಸುರಕ್ಷೆಗಾಗಿ ನಿರ್ಭಯ ಯೋಜನೆಯಡಿ 660 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕ ಪೊಲೀಸರು ಹಲವಾರು ಪ್ರಕರಣಗಳಲ್ಲಿ ಸಾಹಸ ಮತ್ತು ಚಾಣಾಕ್ಷತನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅತ್ಯಂತ ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ. ಆ ಕಾರಣಕ್ಕಾಗಿಯೇ ದೇಶದಲ್ಲಿ ಕರ್ನಾಟಕ ಪೊಲೀಸ್‌ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದರೆ ಇದೆಲ್ಲದರ ಮಧ್ಯೆ ತನಿಖೆಯ ಸಂದರ್ಭದಲ್ಲಿ ಹಲವು ಸವಾಲುಗಳು ಎದುರಾಗುತ್ತವೆ. ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ ಇದಾವುದಕ್ಕೂ ವಿಚಲಿತರಾಗದೇ ವಿಷಕಂಠನಂತೆ ಕರ್ತವ್ಯ ನಿರ್ವಹಣೆ ಮಾಡುವಂತೆ ಅವರು ಪೊಲೀಸ್‌ ಅಧಿಕಾರಿಗಳಿಗೆ ಕರೆ ನೀಡಿದರು.

ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್‌ ತರಬೇತಿ ನೀಡಲಾಗುವುದು. ಅದಕ್ಕೆ ಕೆಎಸ್‌ಆರ್‌ಪಿ ಸಜ್ಜಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ಮುಂಬೈನಲ್ಲಿ ಹೆಚ್ಚಿದ ಕೋವಿಡ್  : ಒಂದೇ ದಿನ 8,832 ಪ್ರಕರಣ ಪತ್ತೆ

ಡ್ರಗ್ಸ್‌ ವಿರುದ್ಧ ಸಮರ: ಕಳೆದ ಕೆಲ ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಡ್ರಗ್ಸ್‌ ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೋಗಿ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಹಚ್ಚಲಾಗಿದೆ. ಅದಕ್ಕೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಕೂಡ ಸಹಕಾರ ನೀಡಬೇಕು ಎಂದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 125 ಮಂದಿ ಅಧಿಕಾರಿ-ಸಿಬ್ಬಂದಿಗೆ ಮುಖ್ಯಮಂತ್ರಿ ಪೊಲೀಸ್‌ ಪದಕ ವಿತರಿಸಲಾಯಿತು.  ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಕೆಎಸ್ಆರ್‌ಪಿ ಎಡಿಜಿಪಿ ಅಲೋಕ್‌ ಕುಮಾರ್‌ ಹಾಗೂ ಇತರೆ ಹಿರಿಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next