Advertisement

ವಿಮಾನ ನಿಲ್ದಾಣ ವರ್ಷದೊಳಗೆ ಆರಂಭ

05:33 PM Feb 17, 2021 | Team Udayavani |

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷ ದೊಳಗೆ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೊದಲ ಹಂತದಲ್ಲಿ ರನ್‌ವೇ ಮತ್ತು ಕಾಂಪೌಂಡ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎರಡನೇ ಹಂತದಲ್ಲಿ ಟರ್ಮಿನಲ್‌ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕಿದ್ದು, ಟೆಂಡರ್‌ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲಾ ಕಾಮಗಾರಿಗಳನ್ನು ಜತೆಯಾಗಿಯೇ ನಡೆಸಲು ಸೂಚನೆ ನೀಡಲಾಗಿದ್ದು, ಅನುದಾನಕ್ಕೆ ಯಾವುದೇ ಕೊರತೆ ಇಲ್ಲ. ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ತ್ವರಿತವಾಗಿ ನಡೆಯುತ್ತಿದ್ದು, ಇನ್ನಷ್ಟು ವೇಗವಾಗಿ ಯೋಜನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಕಾಮಗಾರಿಗೆ ಯಾವುದೇ ಅಡಚಣೆಯಾಗದಂತೆ ಜಲ್ಲಿ ಒದಗಿಸಲು ಸ್ಥಳೀಯವಾಗಿ 4 ಎಕರೆ ಕ್ವಾರಿ ಒದಗಿಸಲಾಗಿದೆ. ಎರಡು ತಿಂಗಳ ಬಳಿಕ ಮತ್ತೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಲಾಗುವುದು. ಇದು ಪೂರ್ಣ ಪ್ರಮಾಣದ ವಿಮಾನ ನಿಲ್ದಾಣವಾಗಿದ್ದು, ರಾತ್ರಿ ವಿಮಾನಗಳ ಇಳಿಯುವಿಕೆಗೂ ವ್ಯವಸ್ಥೆ ಕಲ್ಪಿಸಲಾಗುವುದು. ವಿಮಾನ ನಿಲ್ದಾಣದಿಂದ ಈ ಭಾಗದ ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಕೇಂದ್ರ ಕ್ರೀಡಾ ಸಚಿವರ ಭೇಟಿ: ಶಿವಮೊಗ್ಗದಲ್ಲಿ ಕ್ರೀಡಾ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಹಲವಾರು ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರು ಫೆ.21ರಂದು ಶಿವಮೊಗ್ಗಕ್ಕೆ ಆಗಮಿಸಿ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.

ಸಹ್ಯಾದ್ರಿ ಕಾಲೇಜಿನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಸ್ಮಾರ್ಟ್‌ ಸಿಟಿ ಯೋಜನೆಯಡಿ 4 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಶಿವಮೊಗ್ಗದಲ್ಲಿ ವಿಶೇಷ ಕ್ರೀಡಾ ವಲಯ ಸ್ಥಾಪನೆ ಕುರಿತು ಸಚಿವರು ಸ್ಥಳ ಪರಿಶೀಲನೆ ಕೈಗೊಳ್ಳಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಾಸಕರಾದ ಅಶೋಕ ನಾಯ್ಕ, ಆಯನೂರು ಮಂಜುನಾಥ, ರುದ್ರೇಗೌಡ, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next