ಬೆಂಗಳೂರು: ಇಂದು ಭದ್ರಾ ಮತ್ತು ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಭದ್ರ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಕೇಂದ್ರ ಸಂಪುಟದ ಅನುಮತಿ ಬೇಕಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ನಾನು ಶೀಘ್ರ ಮಾತುಕತೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ ಅಕ್ರಮ ಏನಾದರೂ ನಡೆದರೆ ಅಧಿಕಾರಿಗಳನ್ನು ಹೊಣೆ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದೇನೆ. ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸುತ್ತೇವೆ. ಸಾಲ ತಂದಾದರೂ ನೀರಾವರಿ ಯೋಜನೆಗಳ ಕಾಮಗಾರಿ ಮುಗಿಸುತ್ತೇವೆ ಎಂದರು.
ಇದನ್ನೂ ಓದಿ:ಶಾಸಕ ಮುನಿರತ್ನಗೆ ಸಚಿವ ಸ್ಥಾನ ನೀಡಲು ಸಿಎಂ ಒಪ್ಪಿದ್ದಾರೆ: ಭೈರತಿ ಬಸವರಾಜ್
ನೀತಿ ಆಯೋಗದಿಂದ ನಿಗದಿಪಡಿಸಿರುವ ಸುಸ್ಥಿರ ಅಭಿವೃದ್ಧಿ ಸಾಧನೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮತ್ತಷ್ಟು ಮುಂಚೂಣಿಗೆ ಒಯ್ಯುವ ಕುರಿತು ಚರ್ಚಿಸಲಾಗಿದೆ ಎಂದು ಸಿಎಂ ಹೇಳಿದರು.
ಶಾಪಿಂಗ್ ಮಾಲ್ ತೆರೆಯುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಕೆಲವು ಷರತ್ತು ಹಾಕಿ ವಿನಾಯಿತಿಗಳನ್ನು ಕೊಡುವ ಬಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇನೆ. ಇದೇ ವಿಚಾರವನ್ನು ಮಾಲ್ ಅಸೋಸಿಯೇಷನ್ ನವರಿಗೂ ಹೇಳಿದ್ದೇನೆ ಎಂದರು.