ಹೊಸದಿಲ್ಲಿ: ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಅವರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಯ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ.
ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಮೇಕೆದಾಟು ಯೋಜನೆ ಜಾರಿ ಕುರಿತು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇರತಕ್ಕಂತಹ ವಾಸ್ತವ ಅಂಶಗಳನ್ನು ನಾವು ಗಮನಕ್ಕೆ ತಂದಿದ್ದು ಕೇಂದ್ರ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ ಮತ್ತು ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದರು.
ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಯಾವುದೇ ಕ್ಷಣದಲ್ಲಿ ಕಾನೂನಾತ್ಮಕವಾಗಿ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಸಿಎಂ ಹೇಳಿದರು.
ಗುರುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಚಿವ ಎಚ್.ಡಿ.ರೇವಣ್ಣ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ತಮಿಳುನಾಡಿಗೆ ಹರಿದು ಹೋಗಿ ವ್ಯರ್ಥವಾಗುವ ಕಾವೇರಿ ನೀರನ್ನು ಬಳಸಿಕೊಳ್ಳುವ ಮೇಕೆದಾಟು ಯೋಜನೆಯ ಮೂಲಕ ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಚನೆ ಸರ್ಕಾರದ್ದಾಗಿದೆ.