ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಗೆಲುವಿಗೆ ರಣತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಸ್ಥಳೀಯ ಮುಖಂಡರ ಜತೆಗೆ ಸಮಾಲೋಚನೆ ನಡೆಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದ ಅವರು ಚಾಮುಂಡೇಶ್ವರಿ ಕ್ಷೇತ್ರದ ಡಿ.ಸಾಲುಂಡಿ ಗ್ರಾಮದಲ್ಲಿ ಶ್ರೀ ಮುರುಡ ಬಸವೇಶ್ವರ ಸ್ವಾಮಿ ಓಕಳಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ನನಗೆ ರಾಜಕೀಯವಾಗಿ ಜನ್ಮ ನೀಡಿದ ಹಾಗೂ ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜಕೀಯವಾಗಿ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಕಡೇಯ ಚುನಾವಣೆ ಎದುರಿಸುತ್ತಿದ್ದು, ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ನಂತರ ನಗರದ ಜೆ.ಪಿ. ಪ್ಯಾಲೇಸ್‌ನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಲಹೆ ನೀಡಿ, ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಸಂಸದ ಆರ್.ಧ್ರುವನಾರಾಯಣ, ಮಾಜಿ ಶಾಸಕ ಸತ್ಯನಾರಾಯಣ, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಜೆಡಿಎಸ್‌ಗೂ ಪ್ರತಿಷ್ಠೆ: ಸಭೆ ನಡೆಸಿ ತಿರುಗೇಟು
ಇತ್ತ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸಹ ನಗರದ ಖಾಸಗಿ ಹೋಟೆಲ್‌ನಲ್ಲಿ ಕ್ಷೇತ್ರದ ಕುರುಬ ಸಮಾಜದ ಮುಖಂಡರ ಸಭೆ ನಡೆಸುವ ಮೂಲಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಕುರುಬ ಸಮುದಾಯದ ಮುಖಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೆಗಣಿಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕ್ಷೇತ್ರದ ಜನರನ್ನೂ ಸಂಪೂರ್ಣವಾಗಿ ಮರೆತಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ತಕ್ಕ ಪಾಠಕಲಿಸಬೇಕೆಂದು ಮನವಿ ಮಾಡಿದರು.
ಮುಖಂಡರಾದ ಬೆಳವಾಡಿ ಶಿವಮೂರ್ತಿ, ಕೋಟೆಹುಂಡಿ ಮಹದೇವು, ಹಿನಕಲ್ ರಾಜಣ್ಣ, ಪ್ರೇಮ, ಚಿಕ್ಕತಾಯಮ್ಮ ಸೇರಿದಂತೆ ನೂರಾರು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.