ಚಿಕ್ಕಬಳ್ಳಾಪುರ: ಸ್ಥಗಿತಗೊಂಡಿರುವ ಹೆಬ್ಟಾಳ, ನಾಗವಾರ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸಿ ಜಿಲ್ಲೆಯ ಅಂತರ್ಜಲ ವೃದ್ಧಿಗೆ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ತಿಳಿಸಿದರು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ರೈತ ಸಂಘಟನೆಗಳ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ರೈತ ಮುಖಂಡರು, ಎಚ್.ಎನ್ ವ್ಯಾಲಿ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಗಮನ ಸೆಳೆದಾಗ ಸಿಎಂ ಯಡಿಯೂರಪ್ಪ, ಈ ಭರವಸೆ ನೀಡಿದ್ದಾರೆ ಎಂದು ಭಕ್ತರಹಳ್ಳಿ ಭೈರೇಗೌಡ ಮಂಗಳವಾರ ಉದಯವಾಣಿಗೆ ತಿಳಿಸಿದರು.
ಯೋಜನೆ ಶೀಘ್ರ ಪೂರ್ಣ: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆಗೊಳಿಸಿ ಬಹುತೇಕ ಕಾಮಗಾರಿ ಮುಗಿದರೂ ಜಿಲ್ಲೆಯ ಕೆರೆಗಳಿಗೆ ನೀರು ಹರಿಯದ ಬಗ್ಗೆ ಸಿಎಂ ಗಮನ ಸೆಳೆದಾಗ ತ್ವರಿತವಾಗಿ ಬಾಕಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಹಾಗೂ ಈ ಸಂಬಂಧ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು: ಜಿಲ್ಲೆಯ ರೇಷ್ಮೆ ಬೆಳೆಗಾರರು ಅನುಭವಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಬೆಲೆ ಏರಿಳಿತ ಬಗ್ಗೆಯು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದು, ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ. ಉಳಿದಂತೆ ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಅದಕ್ಕೆ ಬೇಕಾದ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು, ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ನೀಡಬೇಕು, ಎತ್ತಿನಹೊಳೆಗೆ ಬೇಕಾದ ಅಗತ್ಯ ಅನುದಾನ ನೀಡಿದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳ ಗಮನ ಸೆಳೆದಿರುವುದಾಗಿ ಭಕ್ತರಹಳ್ಳಿ ಭೈರೇಗೌಡ ತಿಳಿಸಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ, ಮಹಿಳಾ ಸಂಚಾಲಕಿ ಉಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಪ್ಪಳ್ಳಿ ಶ್ರೀನಿವಾಸ್ ಸೇರಿದಂತೆ ಕೆ.ಎಸ್.ಪುಟ್ಟಣ್ಣಯ್ಯ ರೈತ ಸಂಘದ ಲಕ್ಷ್ಮೀನಾರಾಯಣರೆಡ್ಡಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ರೈತಪರ ಸಮಸ್ಯೆಗಳನ್ನು ಸಿಎಂ ಗಮನ ಸೆಳೆದಿದ್ದಾರೆ.
ರಾಜ್ಯದಲ್ಲಿ ರೈತ ಪರ ಹೋರಾಟಗಾರರ ಮೇಲೆ ಹೋರಾಟಗಳ ಸಂದರ್ಭದಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಹೂಡಿರುವ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲೆಯ ರೈತರ ಮೇಲೆ ಹೂಡಿರುವ ಪ್ರಕರಣಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರಾಜ್ಯಾಧ್ಯಕ್ಷರ ಮುಖಾಂತರ ಸಲ್ಲಿಸಲಾಗುವುದು.
-ಭಕ್ತರಹಳ್ಳಿ ಭೈರೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ