ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸೋಮವಾರ ನ್ಯೂ ಜೆರ್ಸಿಯಿಂದ ವಾಷಿಂಗ್ಟನ್ ಡಿ.ಸಿ.ಗೆ ತೆರಳಿದರು.
ಜು.2ರಂದು ವಾಷಿಂಗ್ಟನ್ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚಿಸುವರು.
ಜು.5 ರಂದು ಒಕ್ಕಲಿಗರ ಪರಿಷತ್ ಅಮೆರಿಲದ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಮಧ್ಯೆ, ವಾಷಿಂಗ್ಟನ್ ಡಿ.ಸಿ.ಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ರಾಜಕೀಯ ವಿದ್ಯಮಾನ ಕುರಿತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ,
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಈ ಮುಖಂಡರು ಮುಖ್ಯಮಂತ್ರಿಯವರಿಗೆ ತಿಳಿಸಿದರು ಎನ್ನಲಾಗಿದೆ.