ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಇತ್ತೀಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ.
ಅಂತಹ ಪ್ರದೇಶ ಗುರುತಿಸಿ ಸೀಲ್‌ಡೌನ್ ಮಾಡುವಂತೆ ಶನಿವಾರ ಮಧ್ಯಾಹ್ನ ನಡೆದ ಕೋವಿಡ್ ನಿಗ್ರಹ ಕಾರ್ಯಪಡೆ ಸಭೆಯಲ್ಲಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆಂದು ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ವರ್ಗ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದ ಕರ್ನಾಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ.
ಅದನ್ನು ನಿಯಂತ್ರಿಸಿ ಕೋವಿಡ್ 19 ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾರ್ಯನಿರ್ವಸಲು ಮುಖ್ಯಮಂತ್ರಿ ತಿಳಿಸಿದ್ದಾರೆಂದರು. ಕೋವಿಡ್ 19 ಕಾರ್ಯಪಡೆ ಸಭೆಯಲ್ಲಿ ಲಾಕ್‌ಡೌನ್ ವಿಚಾರ ಚರ್ಚೆಗೆ ಬಂದಿತ್ತು. ಈ ವೇಳೆ ಲಾಕ್‌ಡೌನ್ ಬೇಕಿಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿಯವರಿಗೆ ಹೇಳಿದ್ದೇವೆ. ಮುಂದೆ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆಂದರು.
ಕಾನೂನು ಕ್ರಮ: ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಯಿಂದ ಜವಾಬ್ದಾರಿ ಹಂಚಿಕೆ: ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದರ್ಶಕ ರೀತಿಯಲ್ಲಿ ಕಾರ್ಯಾಚರಿಸಬೇಕು. ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಸಿಎಂ ತಿಳಿಸಿದ್ದಾರೆ. ಕೋವಿಡ್ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ನೀತಿ ನಿರೂಪಣೆ, ಮಾರ್ಗಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್‌ರೂಮ್ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ.
ಕೋವಿಡ್ ಕೇರ್ ಸೆಂಟರ್‌ಗಳ ಸ್ಥಾಪನೆ ಮತ್ತು ನಿರ್ವಹಣೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ನೀಡಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆಂದು ಸಚಿವ ಸುಧಾಕರ್ ತಿಳಿಸಿದರು.