Advertisement

CM Siddaramaiah: ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನಲ್ಲಿ ತಿದ್ದುಪಡಿ ತರಲು ಚಿಂತನೆ

09:11 PM Oct 15, 2024 | Team Udayavani |

ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರ ಯೋಚಿಸುತ್ತಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡಗಳಲ್ಲಿ ಡ್ರಗ್ಸ್‌ ಹಾವಳಿ ಜಾಸ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ರಾಜ್ಯ ಎನ್‌ಎಸ್‌ಎಸ್‌ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಬಾಗಿತ್ವದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್‌ ಜಾಗೃತಿ ಜಾಥಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಮಾಣವಚನ ಬೋಧಿಸಿ ಮಾತನಾಡಿದರು.

ಡ್ರಗ್ಸ್‌ ಹಾವಳಿ ನಿಯಂತ್ರಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಇದಕ್ಕೆ ಇನ್ನೂ ಕಠಿಣ ಕಾನೂನು ತರಲು ಸಾಧ್ಯವಾದರೆ ಕಾನೂನುಗಳನ್ನು ತಿದ್ದುಪಡಿ ಮಾಡುವ ಚಿಂತನೆಗಳಿವೆ. ಮುಂದಿನ ದಿನಗಳಲ್ಲಿ ಇದನ್ನು ಮಾಡುತ್ತೇವೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದರು.

ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್‌:
ಡಬ್ಲ್ಯೂಎಚ್‌ಒ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50ರಷ್ಟು ಜನ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ತಂಬಾಕು ಸೇವನೆ ಮಾಡದಂತೆ ಯುವಜನರಿಂದ ಪ್ರತಿಜ್ಞೆ:
ಯುವ ಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.

Advertisement

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next