ಬೆಂಗಳೂರು: ರಾಜ್ಯ ಸರ ಕಾರದ ವಿರುದ್ಧ ಜಾಲತಾಣಗಳಲ್ಲಿ ಪ್ರಸಾರ ವಾಗುತ್ತಿರುವ ಸುಳ್ಳು ಸುದ್ದಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಗೃಹ ಸಚಿವ ಡಾ| ಪರಮೇಶ್ವರ ಜತೆಗೆ ಚರ್ಚೆ ನಡೆಸಿದ ಬಳಿಕ ಸಿಎಂ ಈ ಸೂಚನೆ ನೀಡಿದ್ದಾರೆ. ಸುಳ್ಳು ಸುದ್ದಿಗಳ ಮೂಲ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರೆಟ್ ಹಾಗೂ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಫ್ಯಾಕ್ಟ್ ಚೆಕಿಂಗ್ ಟೀಮ್ ಪ್ರಾರಂಭಿಸುವಂತೆ ಸೂಚನೆ ನೀಡಿದ್ದಾರೆ.
2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿಯೂ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ಧಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸುಳ್ಳು ಸುದ್ದಿಗಳನ್ನು ಹೆಚ್ಚು ಸೃಷ್ಟಿಸಿ ಅಶಾಂತಿ ಉಂಟು ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.
ಸಿದ್ದರಾಮಯ್ಯನವರೇ, ನೀವೇನೋ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ ಜರುಗಿಸುತ್ತೇನೆ ಎಂದು ಹೇಳಿರುವ ಸುದ್ದಿ ನೋಡಿದೆ. ನಿಮ್ಮ ಸಂಪುಟದ ಸಚಿವರೇ ರಾಜ್ಯ ಸರಕಾರದ ಸರ್ವರನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ಎಂದು ಹೇಳಿರುವುದು ಫೇಕ್ ನ್ಯೂಸ್ ಅಲ್ಲವೇ. ಹಾಗೆ ಹೇಳಿದವರು ಆರೋಪ ಸಾಬೀತು ಮಾಡಲಿ.
– ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ