Advertisement
ಈಗಾಗಲೇ ಮೈಸೂರಿನಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಪೂರಕ ವಾತವಾರಣ ಸೃಷ್ಟಿ ಮತ್ತು ಅದಕ್ಕೆ ಬೇಕಾದ ವೇದಿಕೆ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು ಮೈಸೂರು ಭಾಗದಲ್ಲಿ ಲಿಂಗಾ ಯತ, ಬ್ರಾಹ್ಮಣ ಸುಮುದಾಯದ ಪ್ರಮುಖ ಮುಖಂಡರನ್ನು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇತ್ತ ಮೈತ್ರಿ ಪಕ್ಷಗಳ ನಾಯಕರು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಹೆಸರಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಹೊಂದಾಣಿಕೆ ತರಲು ಮುಂದಾಗಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರನ್ನು ಸೆಳೆಯುತ್ತಿರುವ ಕಾಂಗ್ರೆಸ್‌ಗೆ ಹಾಗೂ ಒಕ್ಕಲಿಗ ಸಮುದಾಯದ ಮತಗಳು ವಿಭಜನೆ ಆಗದಂತೆ ತಡೆಯಲು ಮೈತ್ರಿ ಪಕ್ಷ ಪ್ರತಿತಂತ್ರ ಹೆಣೆಯುತ್ತಿದ್ದು ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಅಖಾಡಕ್ಕಿಳಿಯುತ್ತಿದ್ದಾರೆ. ಬುಧವಾರ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿಗೆ ಆಗಮಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಕುಮಾರಸ್ವಾಮಿ ಅವರು ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಬಳಿಕ ವಿಜಯೇಂದ್ರ ಜತೆಗೂಡಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಲಿದ್ದಾರೆ. ಈ ಮೂಲಕ ಎರಡೂ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಹೊಂದಾಣಿಕೆಯ ಬೆಸುಗೆ ಹಾಕಲು ಮುಂದಾಗಿದ್ದಾರೆ.
Related Articles
Advertisement