Advertisement

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಪ್ರಧಾನಿಗೆ ಸಿಎಂ ಪತ್ರ

07:37 AM Jan 26, 2018 | Team Udayavani |

ಬೆಂಗಳೂರು: “ನಡೆದಾಡುವ ದೇವರು’ ಎಂದು ಹೆಸರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶತಾಯುಷಿ
ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

Advertisement

ತುಮಕೂರಿನ ಸಿದ್ಧಗಂಗಾ ಮಠ ಸುಮಾರು 600 ವರ್ಷಗಳ ಇತಿಹಾಸ ಹೊಂದಿದ್ದು, 110 ವರ್ಷ ವಯಸ್ಸಿನ ಡಾ. ಶಿವಕುಮಾರ ಸ್ವಾಮೀಜಿ 1941 ರಿಂದಲೇ ಯಾವುದೇ ಜಾತಿ, ಧರ್ಮದ ಭೇದವಿಲ್ಲದೇ ಬಡ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಶಿಕ್ಷಣ ನೀಡುತ್ತಿದ್ದಾರೆ. ಡಾ. ಶಿವಕುಮಾರ ಸ್ವಾಮೀಜಿಯವರಿಂದ ಸ್ಥಾಪಿತವಾಗಿರುವ ಸಿದ್ಧಗಂಗಾ ಎಜುಕೇಶನ್‌ ಸೊಸೈಟಿ ಮೂಲಕ 130ಕ್ಕೂ ಹೆಚ್ಚು ಶಿಕ್ಷಣ
ಸಂಸ್ಥೆಗಳನ್ನು ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ನಡೆಸುತ್ತಿದ್ದಾರೆ. ಮಠದಲ್ಲಿ ಸುಮಾರು 9 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಿದ್ದಾರೆ. 

ಶಿವಕುಮಾರ ಸ್ವಾಮೀಜಿ ಅವರು ಕಳೆದ 7 ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಮಾನವೀಯ ಗುಣಗಳನ್ನು ಬೆಳೆಸಲು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಸಮಾಜಕ್ಕೆ ತಮ್ಮದೇ ಆದ ರೀತಿ ಸೇವೆ
ಸಲ್ಲಿಸುತ್ತಿದ್ದಾರೆ. ಶ್ರೀಗಳು ಮಾನವ ಕಲ್ಯಾಣಕ್ಕಾಗಿ ಮಾಡುತ್ತಿರುವ ಅವಿರತ ಸೇವೆಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ
ಭಾರತ ರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ನಡೆದಾಡುವ ದೇವರು ಎಂದು ಕರೆಸಿಕೊಳ್ಳುವ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next