Advertisement

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

12:08 PM Jul 26, 2023 | sudhir |

ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Advertisement

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದರು.

ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ತಮ್ಮ ಬೋರ್ಡ್‌ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.

Advertisement

ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಿಹಾದಿಗಳ ಆಟ ನಡೆಯಲು ಬಿಡುವುದಿಲ್ಲ: ಶಿಲ್ಪಾ ಜಿ. ಸುವರ್ಣ

Advertisement

Udayavani is now on Telegram. Click here to join our channel and stay updated with the latest news.

Next