ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಸಿದ್ದರಾಗಿದ್ದಾರೆ.
ಗುರುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಬಾಗಲಕೋಟೆ ಮುಖಂಡರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಮಾಡಿಕೊಂಡ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಷ್ಟ ಎಂಬ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಅವರಿಗೆ ಹೈ ಕಮಾಂಡ್ ಗ್ರೀನ್‌ಸಿಗ್ನಲ್ ನೀಡಿತ್ತು. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏಪ್ರಿಲ್ 24 ರಂದು ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಾದಾಮಿ ಕ್ಷೇತ್ರದಲ್ಲಿ 2.15 ಲಕ್ಷ ಮತದಾರರಿದ್ದು, ಕುರುಬ ಸಮುದಾಯದ 65 ಸಾವಿರ ಮತದಾರರಿದ್ದು, ಆ ಸಮುದಾಯದ ಮತಗಳನ್ನು ಹಿಡಿದಿಡುವ ಜವಾಬ್ದಾರಿಯನ್ನು ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿಗೆ ವಹಿಸಲಾಗಿದೆ. ಲಿಂಗಾಯತ ಸಮುದಾಯ 45 ಸಾವಿರ ಮತದಾರರಿದ್ದು, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ ಪಾಟೀಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಕ್ಷೇತ್ರ ಬಿಟ್ಟುಕೊಟ್ಟಿದ್ದೇನೆ. ಚುನಾವಣೆಯ ಜವಾಬ್ದಾರಿಯನ್ನು ನಾನೇ ನೋಡಿಕೊಳ್ಳುತ್ತೇನೆ. ಎಚ್.ಎಂ. ರೇವಣ್ಣ ಪ್ರಚಾರಕ್ಕೆ ಬಂದು ಹೋಗಬಹುದು.
– ಬಿ.ಬಿ. ಚಿಮ್ಮನಕಟ್ಟಿ, ಬಾದಾಮಿ ಕ್ಷೇತ್ರದ ಶಾಸಕ.