ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಜಿಲ್ಲೆಗೆ ಬರುತ್ತಿರುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಎಲ್ಲ ರೀತಿಯ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.
ಬನ್ನಂಜೆಯಲ್ಲಿ ನಿರ್ಮಾಣ ವಾಗಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಅಜ್ಜರಕಾಡಿನಲ್ಲಿ ನಿರ್ಮಾಣವಾಗಿರುವ ಜಿಲ್ಲಾ /ನಗರ ಕೇಂದ್ರ ಡಿಜಿಟಲ್ ಗ್ರಂಥಾಲಯದಲ್ಲಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ರವಿವಾರ ಪರಿಶೀಲನೆ ನಡೆಸಲಾಯಿತು.
ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿ.ಪಂ. ಸಿಇಒ ಡಾ| ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಮೊದಲಾದವರು ಉದ್ಘಾಟನೆಗೊಳ್ಳಲಿರುವ ಮತ್ತು ಸಭಾ ಕಾರ್ಯಕ್ರಮ ನಡೆಯಲಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸ್ ಇಲಾಖೆಯಿಂದ ಹೆಚ್ಚುವರಿ ಸಿಬಂದಿ ನೇಮಕ ಮಾಡಲಾಗಿದೆ. ಆದಿ ಉಡುಪಿಯಲ್ಲಿರುವ ಹಾಲಿಪ್ಯಾಡ್‌ನಲ್ಲೂ ಸಿಬಂದಿ ನಿಯೋಜನೆಯಾಗಿದೆ.
ಮುಖ್ಯಮಂತ್ರಿಯವರು ಹೆಲಿಕಾಪ್ಟರ್ ಮೂಲಕ ಜಿಲ್ಲೆಗೆ ಆಗಮಿಸಲಿದ್ದಾರೆ. ಅನಂತರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡುವರು. ಅನಂತರ ಉಡುಪಿಗೆ ವಾಪಸ್ ಬಂದು ಗ್ರಂಥಾಲಯ ಹಾಗೂ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಉದ್ಘಾಟನೆ, ಸಗ್ರಿ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ಬೆಳಗ್ಗೆ ಮಂಗಳೂರಿಗೆ ತೆರಳು ವರು.