ದಾವಣಗೆರೆ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಕಾನೂನು ಹೋರಾಟ ನಡೆಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S.S. Mallikarjun) ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ನಿಜಕ್ಕೂ ಮುಗ್ಧರು. ಹಾಗಾಗಿ ರಾಜೀನಾಮೆ ನೀಡಬೇಕಾಗಿಲ್ಲ. ಇಡೀ ಸಚಿವ ಸಂಪುಟ ಅವರೊಂದಿಗೆ ಇರುತ್ತದೆ ಎಂದರು.
ಹೈಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಬಂಧನದ ವಾರೆಂಟ್ ಏನೂ ನೀಡಿಲ್ಲ. ಮುಡಾ ವಿಚಾರವಾಗಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ನಡೆಸುವರು. ವಿಜಯಶಾಲಿಯಾಗಿ ಹೊರ ಬರುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಬಂಧನದ ವಾರೆಂಟ್ ಆಗಿತ್ತು. ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ಮಾತ್ರ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಬಡವರಿಗೆ ಅನುಕೂಲ ಆಗುವಂತಹ ಅನೇಕ ಕಾರ್ಯಕ್ರಮ ನೀಡುತ್ತಿರುವುದನ್ನು ನೋಡಿ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ ಎಂದು ದೂರಿದರು.
ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಹೇಳಿರುವುದು ಅವರ ವೈಯಕ್ತಿಕ ಅನಿಸಿಕೆ. ಪಕ್ಷದ್ದಲ್ಲ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕಾಗಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಬಿಐಗೆ ಮುಕ್ತ ತನಿಖೆ ನಡೆಸಲು ಅನುಮತಿ ನಿರ್ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಏಕಾಏಕಿ ರಾತ್ರೋರಾತ್ರಿ ನೋಟಿಸ್ ಕೊಟ್ಟರೆ ಸುಮ್ಮನಿರಬೇಕೆ?. ಏನೇ ಆಗಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿಯೇ ಮುಂದಿನ ಕ್ರಮ ಆಗಬೇಕು ಎಂದು ತಿಳಿಸಿದರು.