ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಕಲ್ಲುಗಣಿಗಾರಿಕೆಯಲ್ಲಿ ಸ್ಪೋಟವಾಗಿ ಹಲವು ಮಂದಿ ಕಾರ್ಮಿಕರು ಮೃತಪಟ್ಟ ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಬಿಎಸ್ ವೈ, ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
ಗುರುವಾರ ರಾತ್ರಿ 10.20ರ ಸುಮಾರಿಗೆ ಹುಣಸೋಡು ಬಳಿ ಜಿಲೆಟಿನ್ ಕಡ್ಡಿ ತುಂಬಿದ್ದ ಲಾರಿ ಸ್ಫೋಟವಾಗಿ ಬಿಹಾರ ಮೂಲದ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಪೋಟದ ತೀವ್ರತೆಗೆ ಶವಗಳು ಛಿದ್ರ ಛಿದ್ರಗೊಂಡಿವೆ. ಸ್ಫೋಟದ ತೀವ್ರತೆಗೆ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಧೂಳು ಆವರಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.