ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ, ಈ ಮೊದಲೇ ನಿಗದಿಯಾದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತಾದರೂ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿಲ್ಲ. ಚುನಾವಣೆ ನೀತಿ ಸಂಹಿತೆ ಜಾರಿಯಾದರೂ ತುರ್ತು ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲು ಅವಕಾಶ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಶೀಘ್ರವೇ ಸಂಪುಟ ಉಪ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸಚಿವರಿಗೆ ಜವಾಬ್ದಾರಿ: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಯಾಗಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ಸಚಿವರು ತಮ್ಮ ಕ್ಷೇತ್ರಗಳಿಗಷ್ಟೇ ಸೀಮಿತವಾಗದೇ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು. ಪ್ರಾಮಾಣಿಕ
ಪ್ರಯತ್ನ ನಡೆಸಿ ಶ್ರಮ ಹಾಕಬೇಕು ಎಂದ ಹೇಳಿದ್ದಾರೆ ಎನ್ನಲಾಗಿದೆ.
ಸತ್ಯವನ್ನೇ ಹೇಳಿದ್ದಾರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕದಲ್ಲಿ ಯಡಿಯೂರಪ್ಪ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಿರುವ ಬಗ್ಗೆ ಸಂಪುಟ ಸಭೆಯಲ್ಲಿ ಸಚಿವರೊಬ್ಬರು ಪ್ರಸ್ತಾಪ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸತ್ಯವನ್ನೇ ಹೇಳಿದ್ದಾರೆ ಬಿಡಿ ಎಂದು ಚಟಾಕಿ ಹಾರಿಸಿದರು ಎನ್ನಲಾಗಿದೆ.