Advertisement
ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವ ಆದರ್ಶಗಳನ್ನು ಜೀವನುದ್ದಕ್ಕೂ ಪಾಲಿಸಿದ ಮಾದೇಗೌಡರು, ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ನಿಧನದಿಂದ ರೈತ ಹಾಗೂ ಜನಪರ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Related Articles
Advertisement
ಮಾದೇಗೌಡರು ಶಾಸಕರಾಗಿದ್ದರು, ಸಚಿವರಾಗಿದ್ದರು, ಸಂಸದರಾಗಿದ್ದರು. ಛಲಬಿಡದ ಹೋರಾಟಗಳಿಂದ ಸಮಾಜಮುಖಿಯಾಗಿ ಕೆಲಸ ಮಾಡಿದ ಅವರು ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. ಕಾವೇರಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ ಅವರು, ರೈತರ ಹಿತಕ್ಕಾಗಿ ತಮ್ಮ ರಾಜಕೀಯ ಭವಿಷ್ಯವನ್ನು ಲೆಕ್ಕಿಸದ ನಿಷ್ಠುರ ನಾಯಕರಾಗಿದ್ದರು. ಅವರ ರಾಜಕೀಯ ಮತ್ತು ವೈಯಕ್ತಿಕ ಜೀವನ ತೆರೆದ ಪುಸ್ತಕವಾಗಿತ್ತು ಎಂದು ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.