ಬೆಂಗಳೂರು: ಚುನಾವಣಾ ಆಯೋಗ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೊಳಿಸಿದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಸಾವಿರಾರು ಫೆಕ್ಸ್, ಬ್ಯಾನರ್ ಹಾಗೂ ಜಾಹೀರಾತುಗಳನ್ನು ತೆರವುಗೊಳಿಸಲಾಗಿದೆ.
ಚುನಾವಣಾ ಆಯೋಗದ ನಿಯಮದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾದ 24 ಗಂಟೆಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಬೇಕು ಎಂದಿದೆ. ಅದರಂತೆ ಮಂಗಳವಾರ ಮಧ್ಯಾಹ್ನದಿಂದಲೇ ನಗರದಲ್ಲಿ ಕಾರ್ಯಾಚರಣೆ ನಡೆಸಿರುವ ಸಿಬ್ಬಂದಿ ಕೇಂದ್ರ, ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಯಕರ ಭಾವಚಿತ್ರವಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನದಿಂದಲೇ ತೆರವು ಕಾರ್ಯಾಚರಣೆ ಆರಂಭವಾದರೂ ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಾದ ಎನ್.ಮಂಜುನಾಥ ಪ್ರಸಾದ್ ಸಂಜೆ ಮಲ್ಲೇಶ್ವರದ ಐಪಿಪಿ ಕೇಂದ್ರದಲ್ಲಿ ಕಾರ್ಯಾಚರಣೆಗೆ ಅಧಿಕೃತ ಚಾಲನೆ ನೀಡಿದರು. ಅದರಂತೆ ರಾತ್ರಿ 10ರವರ ವೇಳೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್ ಹಾಗೂ ಪೋಸ್ಟರ್‌ಗಳನ್ನು ತೆರವುಗೊಳಿಲಾಗಿದೆ.
ಕಾರ್ಯಾಚರಣೆಗಾಗಿ ಈ ಮೊದಲೇ ಪಾಲಿಕೆಯ 8 ವಲಯಗಳಲ್ಲಿ ಜಂಟಿ ಆಯುಕ್ತ ನೇತೃತ್ವದಲ್ಲಿ ಎಂಜಿನಿಯರ್ ಮತ್ತು ಸಿಬ್ಬಂದಿ ತಂಡವನ್ನು ರಚಿಸಲಾಗಿದ್ದರಿಂದ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು. ಜತೆಗೆ ಬಸ್ ತಂಗುದಾಣ ಮತ್ತು ಬಸ್‌ಗಳ ಮೇಲೆ ಹಾಕಲಾಗಿದ್ದ ಸರ್ಕಾರ ಜಾಹಿರಾತುಗಳನ್ನು ತೆರವುಗೊಳಿಸುವಂತೆ ನಿರ್ವಹಣಾ ಸಂಸ್ಥೆ ಹಾಗೂ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸೂಚನೆ ನೀಡಲಾಗಿದೆ.
ಮಂಗಳವಾರ ರಾತ್ರಿ ಪೂರ್ತಿ ಕಾರ್ಯಾಚರಣೆ ಮುಂದುವರಿಯಲಿದ್ದು, 500ಕ್ಕೂ ಹೆಚ್ಚು ಸಿಬ್ಬಂದಿ ತೆರವು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಬುಧವಾರ ಸಂಜೆವರೆಗೆ ಕಾರ್ಯಾಚರಣೆ ಮುಂದುವರಿಯಲಿದ್ದು, ಅಷ್ಟರೊಳಗೆ ನಗರವನ್ನು ಫ್ಲೆಕ್ಸ್, ಬ್ಯಾನರ್ ಮುಕ್ತಗೊಳಿಸಲಾಗುವುದು.
-ಎನ್.ಮಂಜುನಾಥ ಪ್ರಸಾದ್, ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ, ಬಿಬಿಎಂಪಿ ಆಯುಕ್ತರು