ಮೈಸೂರು: ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನ ಮಾಡುವ ಮೂಲಕ ರಾಜ್ಯವನ್ನು ಬಾಲ ಕಾರ್ಮಿಕ ಮುಕ್ತ ರಾಜ್ಯ ಎಂದು ಘೋಷಿಸಲು ಸರ್ಕಾರದೊಂದಿಗೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ಮೈಸೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ. ಜೋಶಿ ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳಿದಿದೆ. 14 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊ ಳ್ಳುವುದು ಅಪರಾಧ ಎಂದು ತಿಳಿದಿದ್ದರೂ ಸಹ ಭಾರತದಲ್ಲಿ ಒಂದು ಸಮೀಕ್ಷೆಯ ಪ್ರಕಾರ 1.25 ಕೋಟಿ ಬಾಲಕಾರ್ಮಿಕರಿದ್ದಾರೆ. ಬಾಲಕಾರ್ಮಿಕ ಪದ್ಧತಿಗೆ ಮನುಷ್ಯನು ಅತಿ ಹೆಚ್ಚು ಹಣಗಳಿಸಬೇಕು ಎಂಬ ದುರಾಸೆಯೇ ಮುಖ್ಯ ಕಾರಣ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನವಾಗಬೇಕಾದರೆ ಮಕ್ಕಳಿಗೆ ಕಡಿಮೆ ಹಣ ನೀಡಿ ಕೆಲಸ ಮಾಡಿಸಿಕೊಳ್ಳಬಹುದು ಎಂಬ ಮನೋಭಾವನೆ ದೂರವಾಗಬೇಕು ಎಂದರು. ಸರ್ಕಾರ ಬಡತನ ನಿರ್ಮೂಲನಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ. ಮಕ್ಕಳನ್ನು ಬಾಲಕಾರ್ಮಿ ಕರಾಗಿ ಮಾಡಬೇಡಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಆಚರಣೆ ಕಂಡುಬಂದರೆ ತಕ್ಷಣ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ದಾಖಲಿಸಿ. ಮಕ್ಕಳು ದೇಶದ ಅಮೂಲ್ಯ ಆಸ್ತಿ ಇವರನ್ನು ಸತಜೆಗಳನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರೆ ಅದನ್ನು ವಿರೋಧಿಸಿ ದೂರು ದಾಖಲಿಸಿ. ಜಿಲ್ಲಾಡಳಿತ ನಿಮ್ಮ ಜೊತೆಯಲ್ಲಿದೆ ಎಂದರು.
ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡಲು ಆರ್‌ಟಿಇ ಯೋಜನೆ ಇದೆ. ಸರ್ಕಾರದ ಹಲವಾರು ವಸತಿಶಾಲೆಗಳು ಹಾಗೂ ಶಾಲೆಗಳು ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಜಿಲ್ಲಾದ್ಯಂತ ನೋಂದಣಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ರಾಧ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಭಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್, ಡಾನ್ ಬಾಸ್ಕೋ ಮಕ್ಕಳಾಲಯದ ನಿರ್ದೇಶಕ ಫಾ.ಫ್ರಾನ್ಸಿಸ್ ಜಾನ್ ಇತರರು ಇದ್ದರು.