ಭುವನೇಶ್ವರ: ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳು ಗೋಮಾಂಸ ಬೇಯಿಸಿ ಸೇವನೆ ಮಾಡಿದ ಘಟನೆ ಒಡಿಶಾದಲ್ಲಿ ಬೆಳಕಿಗೆ ಬಂದಿದೆ.
ಒಡಿಶಾದ ಬೆರ್ಹಾಂಪುರದ ಸರ್ಕಾರಿ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಗೋಮಾಂಸವನ್ನು ಅಡುಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ 7 ಹಾಸ್ಟೆಲ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಹಾಸ್ಟೆಲ್‌ನಿಂದ ಹೊರಹಾಕಲಾಗಿದೆ. ಇದಲ್ಲದೆ ಓರ್ವ ವಿದ್ಯಾರ್ಥಿಗೆ ದಂಡವನ್ನೂ ವಿಧಿಸಲಾಗಿದೆ.
ಒಡಿಶಾದ ಬೆರ್ಹಾಂಪುರದಲ್ಲಿರುವ ಪರ್ಲ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ (ಸೆ.15) ರಂದು ಹಾಸ್ಟೆಲ್ ಕೊಠಡಿಯಲ್ಲಿ ಏಳು ವಿದ್ಯಾರ್ಥಿಗಳು ಸೇರಿಕೊಂಡು ಗೋಮಾಂಸ ಬೇಯಿಸಿ ಸೇವಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಯಲ್ಲಿ ಗೋಮಾಂಸ ಸೇವನೆ ಮಾಡಿರುವುದನ್ನು ಇತರ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಗಮನಕ್ಕೆ ತಂದಿದ್ದಾರೆ, ವಾರ್ಡನ್ ಕಾಲೇಜು ಪ್ರಾಂಶುಪಾಲರ ಗಮನಕ್ಕೆ ತಂದಿದ್ದು ಕೂಡಲೇ ಎಚ್ಚೆತ್ತ ಅಧಿಕಾರಿಗಳು ಏಳು ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ಹೊರ ಹಾಕಿದ್ದಾರೆ. ಈ ಘಟನೆಯಿಂದ ಕಾಲೇಜಿನಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದ್ದು, ಕಾಲೇಜಿನ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕಾಲೇಜು ಅಧಿಕಾರಿಗಳು ಕಾಲೇಜಿನ ನೀತಿ, ನಿಯಮಗಳನ್ನು ಗಾಳಿಗೆ ತೂರಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಅಲ್ಲದೆ ಇದಕ್ಕೆ ಸಂಬಂಧಿಸಿ ಓರ್ವ ವಿದ್ಯಾರ್ಥಿಗೆ ದಂಡವನ್ನೂ ವಿಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಜರಂಗದಳ ಆಗ್ರಹ:
ಈ ಬಗ್ಗೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳ ಭಾವನೆಗಳಿಗೆ ಗೌರವ ನೀಡಬೇಕು. ಹಾಸ್ಟೆಲ್‌ನಲ್ಲಿ ದನದ ಮಾಂಸದ ಅಡುಗೆ ಘಟನೆಯು ಅಶಾಂತಿ ಮತ್ತು ಅಭದ್ರತೆಯನ್ನು ಸೃಷ್ಟಿಸಿದೆ. ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಅಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ