ಹಾಸನ: ಮೊಸಳೆ ಹೊಸಹಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಳಾಂತರ ಮಾಡಬಾರದೆಂದು ಗ್ರಾಮಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮೊಸಳೆ ಹೊಸಹಳ್ಳಿಯಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಸೋಮವಾರ ಸಭೆ ಸೇರಿ, ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನು ಕೂಲವಾಗಲೆಂದು ಮೊಸಳೆ ಹೊಸಹಳ್ಳಿಯಲ್ಲಿ 2019-20ನೇ ಸಾಲಿನಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿತ್ತು. ಈಗಾಗಲೇ ಕಾಲೇಜು ಕಟ್ಟಡ, ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ವಾಗಿದ್ದು, ವಿದ್ಯಾರ್ಥಿಗಳು ಒಂದು ವರ್ಷ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ಎಂಜಿನಿಯರಿಂಗ್ ಕಾಲೇಜುನ್ನು ಸರ್ಕಾರ ಸ್ಥಳಾಂತರಿಸಲು ಯತ್ನಿಸಿದೆ ಎಂದು ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ಕಾಲೇಜನ್ನು ಸ್ಥಳಾಂತರ ಮಾಡಕೂಡದು. ಎಚ್‌ಡಿ.ರೇವಣ್ಣ ಅವರ ಮಹತ್ವಾಕಾಂಕ್ಷೆಯಿಂದ ಪ್ರಾರಂಭಿಸಿರುವ ಈ ತಾಂತ್ರಿಕ ಕಾಲೇಜಿಗೇ ಮೊಸಳೆ ಹೊಸಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಮಕ್ಕಳನ್ನು ದಾಖಲಾತಿ ಮಾಡಬೇಕು ಎಂದು ಮನವಿ ಮಾಡಿದರು.
ನಗರ ಪ್ರದೇಶಗಳಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಲಕ್ಷಾಂತರ ರೂ. ಶುಲ್ಕವನ್ನು ಕಟ್ಟಲು ಗ್ರಾಮೀಣ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿಗಳಿಗೆ ಸಾಧ್ಯವಿಲ್ಲ. ಸರ್ಕಾರ ಸ್ಥಳಾಂತರ ಮಾಡಲು ಪ್ರಯತ್ನಿಸಿದರೆ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕಳೆದ ವರ್ಷ ಕಾಲೇಜಿಗೆ 171 ವಿದ್ಯಾರ್ಥಿ ಗಳು ಪ್ರವೇಶ ಪಡೆದುಕೊಂಡಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲೂ ಸಹ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿನ ರೀತಿಯಲ್ಲಿ ಆಗುತ್ತದೆ. ಆದ್ದರಿಂದ ಎಂಜಿನಿಯರಿಂಗ ಕಾಲೇಜಿನ ಸ್ಥಳಾಂತರ ಮಾಡದೆ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಮುಂದುವರಿಸಿ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್. ದ್ಯಾವೇಗೌಡ, ಹಾಸನ ತಾಪಂ ಮಾಜಿ ಸದಸ್ಯ ಎಚ್.ಕೆ.ಚಂದ್ರೇಗೌಡ, ಮುತ್ತಿಗೆ ಹೀರೇಹಳ್ಳಿ ಕಾಳೇಗೌಡ, ಮಿಲ್ ಸಣ್ಣೇಗೌಡ, ಚನ್ನಂಗಿಹಳ್ಳಿ ಶ್ರೀಕಾಂತ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.