ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಸುಳ್ಳಿನ ಬಗ್ಗೆ ಬಿಜೆಪಿ ನಾಯಕ ಆರ್. ಅಶೋಕ್ ಬಹಿರಂಗ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪ ಮಾಡಿರುವ ಅಶೋಕ್ ಅವರಿಗೆ ಮೋದಿಯನ್ನು ಸಮರ್ಥನೆ ಮಾಡಿಕೊಳ್ಳುವುದು ಬಿಟ್ಟರೆ ಬೇರೆ ಏನೂ ಕೆಲಸವಿಲ್ಲ. ಮೋದಿ ಸುಳ್ಳು ಹೇಳಿರುವ ಬಗ್ಗೆ ಅಶೋಕ್ ಬಹಿರಂಗ ಚರ್ಚೆಗೆ ಬರಲಿ ಎಂದು ಆಹ್ವಾನ ನೀಡಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ರಾಜ್ಯಕ್ಕೆ ಬಂದರೆ ಸುಳ್ಳು ಹೇಳಿ ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೇನೂ ಮಾಡುವುದಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಪ್ರಚಾರಕ್ಕೆ ಬರುವಂತೆ ಪ್ರಿಯಾಂಕಾ ವಾದ್ರಾ ಅವರಿಗೆ ಮನವಿ ಮಾಡಲಾಗಿದೆ. ಆದರೆ, ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಅವರು ಇನ್ನೂ ಏನನ್ನೂ ಹೇಳಿಲ್ಲ. ಅವರ ಹೊರತಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಖಷ್ಬೂ, ಗುಲಾಮ್ ನಬಿ ಆಝಾದ್, ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಆಗಮಿಸಲಿದ್ದಾರೆ.
ಎರಡು ದಿನದಲ್ಲಿ ಪಟ್ಟಿ: ಈಗಾಗಲೇ ರಾಹುಲ್ ಗಾಂಧಿ ಹಾಗೂ ದೇವೇಗೌಡರ ನೇತೃತ್ವದಲ್ಲಿ ಜಂಟಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ದೇವೇಗೌಡರು ಹಾಗೂ ಸಿದ್ದರಾಮಯ್ಯ ಅವರ ಜಂಟಿ ಪ್ರಚಾರ ಸಮಾವೇಶಗಳ ಆಯೋಜನೆಗೆ ವೇಳಾ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.
ಇನ್ನೆರಡು ದಿನದಲ್ಲಿ ಜಂಟಿ ಪ್ರಚಾರದ ಅಧಿಕೃತ ವೇಳಾ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ, ಸ್ಥಳೀಯ ಮಟ್ಟದ ಕಾರ್ಯಕರ್ತರಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ, ಅವುಗಳನ್ನು ಬದಿಗಿಟ್ಟು ಪ್ರಚಾರ ನಡೆಸಬೇಕು. ಇಲ್ಲದಿದ್ದರೆ, ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.