Advertisement

ಸರಕು ವಾಹನಗಳಲ್ಲಿ ಜನ ಸಂಚಾರ ತಡೆಗೆ ಆದೇಶ

09:17 AM Apr 23, 2019 | Lakshmi GovindaRaju |

ಬೆಂಗಳೂರು: ಸರಕು ಸಾಗಾಣಿಕೆ ವಾಹನಗಳಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಮಹಿಳೆಯರು, ಕಾರ್ಮಿಕರು ಸೇರಿ ಇತರೆ ಪ್ರಯಾಣಿಕರ ಸಾಗಾಣೆಯನ್ನು ತಡೆಗಟ್ಟಲು ಕ್ರಿಯಾ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

Advertisement

ಈ ಕುರಿತಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿ ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿತು.

ಕಾರ್ಮಿಕರು, ಶಾಲಾ ಮಕ್ಕಳು, ಕೃಷಿ ಕೆಲಸಗಾರರನ್ನು ಸರಕು ಸಾಗಾಣೆ ವಾಹನಗಳಲ್ಲಿ ಸಾಗಿಸುತ್ತಿರುವವರ ವಿರುದ್ಧ ಯಾವುದೇ ಸಮರ್ಪಕ ಕ್ರಮ ಕೈಗೊಳ್ಳದಿರುವ ಬಗ್ಗೆ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ಈ ಕುರಿತು ಸಮಗ್ರ ಕ್ರಿಯಾ ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿತು.

ಈ ಸಂಬಂಧ ವಿವರಣೆ ನೀಡಲು ಸಾರಿಗೆ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಸಂಚಾರ ಎಡಿಜಿಪಿ ಅವರು ಖುದ್ದು ಹಾಜರಾಗುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಅದರಂತೆ, ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ, ಕಾರ್ಮಿಕ ಆಯುಕ್ತ ಪಾಲಯ್ಯ, ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು) ಎಂ.ಎ.ಸಲೀಂ ಸೇರಿ ಇತರ ಹಿರಿಯ ಅಧಿಕಾರಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌, ರಾಜ್ಯ ಸರ್ಕಾರ ಈ ವಿಚಾರವನ್ನು ಆದ್ಯತೆಯ ಮೇಲೆ ಪರಿಗಣಿಸಲಿದ್ದು, ತಕ್ಷಣವೇ ಕ್ರಿಯಾ ಯೋಜನೆಯನ್ನು ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

Advertisement

ಆನಂತರ ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ಪಾಲಿಸಲಾಗುವುದು. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ಬೇಕು ಎಂದು ನ್ಯಾಯಪೀಠವನ್ನು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್‌ ಡಿ. ರೊಜಾರಿಯೊ ವಾದ ಮಂಡಿಸಿದರು.

ಕಳೆದ ವರ್ಷ 28 ಸಾವಿರ ಪ್ರಕರಣಗಳು: ಸರಕು ವಾಹನಗಳಲ್ಲಿ ಜನರನ್ನು ಸಾಗಿಸುತ್ತಿದ್ದವರ ವಿರುದ್ಧ ಸಂಚಾರ ಪೊಲೀಸರು ಕಳೆದ ವರ್ಷ 28 ಸಾವಿರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ವರ್ಷ 986 ಜನರ ವಿರುದ್ಧ ಕೇಸು ದಾಖಲು ಮಾಡಲಾಗಿದೆ.

ನಗರದ ಪೊಲೀಸರು ಶಾಲಾ ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಒತ್ತು ನೀಡುತ್ತಿದ್ದಾರೆ. ಅದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ನ್ಯಾಯಪೀಠಕ್ಕೆ ವಿವರಿಸಿದರು. ಇದೇ ವೇಳೆ ಕಾರ್ಮಿಕ ಆಯುಕ್ತರು ಹಾಗೂ ಸಾರಿಗೆ ಆಯುಕ್ತರು ಸಹ ಆಯಾ ಇಲಾಖೆಗಳು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next