ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ ಉಚ್ಛಾಟಿತ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆ ಹಲವು ಕಡೆಗಳಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿಇಬ್ಬರು ಸಾವನ್ನಪ್ಪಿದ್ದಾರೆ.
ರಾಂಚಿಯಲ್ಲಿ ನಡೆದ ಹಿಂಸಾಚಾರದ ನಂತರ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (RIMS) ಕರೆತರಲಾದ ಗಾಯಾಳುಗಳ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ” ಎಂದು ಎಎನ್ ಐ ವರದಿ ಮಾಡಿದೆ.
ರಾಂಚಿಯ 12 ಠಾಣೆಗಳ ಪ್ರದೇಶಗಳಲ್ಲಿ ಸೆಕ್ಷನ್ 144 ವಿಧಿಸುವುದರ ಜೊತೆಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ನಿನ್ನೆಯ ಪ್ರತಿಭಟನೆ ಮತ್ತು ಹಿಂಸಾಚಾರದ ವೇಳೆ ದೇವಾಲಯದ ಮೇಲೆ ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಜಿಲ್ಲಾಡಳಿತ ಭಾನುವಾರ ಬೆಳಗಿನ ಜಾವದವರೆಗೂ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಇದನ್ನೂ ಓದಿ : ನೂಪುರ್ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯದೆಲ್ಲೆಡೆ ಖಾಕಿ ಕಣ್ಗಾವಲು
ಪ್ರಯಾಗ್‌ರಾಜ್ ಮತ್ತು ಸಹರಾನ್‌ಪುರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಪ್ರತಿಭಟನೆಗಳು ಭುಗಿಲೆದ್ದ ನಂತರ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಯುಪಿ ಪೊಲೀಸರು ರಾಜ್ಯದ ಆರು ಜಿಲ್ಲೆಗಳಿಂದ 130 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ರ ವರೆಗೆ ಬೆಳಗ್ಗೆ 6 ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯಾದ್ಯಂತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಖಚಿತಪಡಿಸಿದ್ದಾರೆ.