ಬೆಂಗಳೂರು: ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟ ಹಾಗೂ ಪ್ರಸಾರ ಮಾಡದವರಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ವಿಚಾರವನ್ನು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಮ್ಮ ವಿರುದ್ಧದ ತನಿಖಾ ಹಂತದಲ್ಲಿರುವ ಮತ್ತು ಶಿಕ್ಷೆ ವಿಧಿಸಲ್ಪಟ್ಟ ಕ್ರಿಮಿನಲ್ ಕೇಸ್‌ಗಳ ಬಗ್ಗೆ ನಾಮಪತ್ರ ಸಲ್ಲಿಸಿದ ದಿನದಿಂದ ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಸಾರ ಹೊಂದಿರುವ 3 ದಿನಪತ್ರಿಕೆಗಳಲ್ಲಿ ಮೂರು ಬಾರಿ ಪ್ರಕಟಿಸಬೇಕು.
ಅದೇ ರೀತಿ, ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ಮಾಡಬೇಕು. ಅಭ್ಯರ್ಥಿಗಳು ಇದರ ಬಗ್ಗೆ ತಮ್ಮ ಪಕ್ಷಗಳಿಗೂ ಮಾಹಿತಿ ನೀಡಬೇಕು. ಆ ಪಕ್ಷಗಳು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಆದರೆ, ಈವರೆಗೆ ಬಹಳಷ್ಟು ಜನ ತಮ್ಮ ವಿರುದ್ಧದ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಪ್ರಕಟಿಸಿಲ್ಲ.
ಈ ಸಂಬಂಧ ಏ.14ರಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಕರೆದು ಈ ವಿಷಯವನ್ನು ಗಮನಕ್ಕೆ ತರಲಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನ ಮತ್ತು ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅವರಿಗೆ ಮನವಿ ಮಾಡಲಾಗಿದೆ. ಇಲ್ಲದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಂಜೀವ್ ಕುಮಾರ್ ತಿಳಿಸಿದರು.