Advertisement

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

02:22 PM Jun 11, 2023 | Team Udayavani |

ಕಲಬುರಗಿ: ರಾಜ್ಯದಲ್ಲಿ ಮಹಿಳಾ ಆರ್ಥಿಕ ಸಬಲೀಕರಣಕ್ಜಾಗಿ ನಾವು ಹಲವಾರು ಯೋಜನೆಗಳನ್ನು ಹೊಂದಿದ್ದೇವೆ. ಆ ನಿಟ್ಟಿನಲ್ಲಿ ಮೊದಲ ಪ್ರಯತ್ನವಾಗಿ ಉಚಿತವಾಗಿ ತಮ್ಮ ಕೆಲಸಗಳಿಗಾಗಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Advertisement

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಪಕ್ಷ ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮಾರ್ಗ ಸೂಚಿ ತಯಾರಿಸಲಾಗಿದ್ದು ಕನಿಷ್ಠ 50,000 ಕೋಟಿ ಹಣ ಬೇಕಾಗುತ್ತದೆ. ಇದರಿಂದ ಆರ್ಥಿಕ ಹೊರೆಯಾದರೂ ಕೂಡಾ ಅದನ್ನು ನಿಭಾಯಿಸುವ ಶಕ್ತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗಿದ್ದು ಈಗಾಗಲೇ ಈ ಯೋಜನೆಗಳ ಜಾರಿಗೆ ಬೇಕಾಗುವ ಹಣಕಾಸು ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕೂಡಾ ಕಂಡುಹಿಡಿಯಲಾಗಿದೆ ಎಂದರು.

ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡಲಾಗುವುದು ಎಂದು ಪ್ರತಿಪಾದಿಸಿದ ಸಚಿವರು ಪಕ್ಷದ ಪ್ರಣಾಳಿಕೆಗಳನ್ನು ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 10 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅವುಗಳನ್ನೂ ಕೂಡಾ ಜಾರಿಗೊಳಿಸಲಾಗುವುದು ಎಂದರು.

Advertisement

ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ನಾಡಿನ ಜನರ ಸಂಕಷ್ಟಗಳನ್ನು ಅರಿತು ಅವರ ಆರ್ಥಿಕ ಸಬಲತೆಗೆ ಬೇಕಾಗುವ ಕಾರ್ಯಕ್ರಮಗಳನ್ನು ರೂಪಿಸಲು ನಿರ್ಧಾರ ಕೈಗೊಳ್ಳಲಾಯಿತು. ಅದರ ಪರಿಣಾಮವಾಗಿ ಪಕ್ಷ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಲಾಯಿತು. ಈಗ ಅವುಗಳನ್ನು ಜಾರಿಗೆ ತರುವ ಬದ್ಧತೆ ಸರ್ಕಾರಕ್ಕಿದ್ದು ವಿರೋಧ ಪಕ್ಷ ಬಿಜೆಪಿ ಈ ಕುರಿತು ಅನಗತ್ಯ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next