ಬೆಂಗಳೂರು: ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವ ಕುರಿತು ವರದಿ ನೀಡಲು ಸರ್ಕಾರ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನ್‌ದಾಸ್ ನೇತೃತ್ವದಲ್ಲಿ ಏಳು ಜನ ತಜ್ಞರ ಸಮಿತಿ ರಚಿಸಿದೆ.
ಸಮಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕಾನಾಥ, ರಾಜಕೀಯ ವಿಶ್ಲೇಷಕ ಮುಜಾಫರ್ ಅಸ್ಸಾದಿ, ಪತ್ರಕರ್ತ ಸರ್ಜು ಕಾಟ್ಕರ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್. ಜಿ. ಸಿದ್ದರಾಮಯ್ಯ, ಸಾಹಿತಿಗಳಾದ ಪುರುಷೋತ್ತಮ ಬಿಳಿಮಲೆ, ರಾಮಕೃಷ್ಣ ಮರಾಠೆ ಸದಸ್ಯರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಸಂಬಂಧಿಸಿದ ಮನವಿಗಳನ್ನ ಪರಿಶೀಲಿಸಲು ಅಲ್ಪಸಂಖ್ಯಾತ ಆಯೋಗಕ್ಕೆ ವರ್ಗಾಯಿಸಿದ್ದರು. ಈ ಬಗ್ಗೆ ಅಲ್ಪಸಂಖ್ಯಾತ ಆಯೋಗವು ವರದಿ ಪಡೆಯಲು ತಜ್ಞರ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಸಮಿತಿ ವೀರಶೈವ ಮತ್ತು ಲಿಂಗಾಯತರ ನಡುವಿನ ವ್ಯತ್ಯಾಸ ಅಥವಾ ಸಾಮ್ಯತೆ ಮತ್ತು ಪ್ರತ್ಯೇಕ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಲು ಕಾನೂನಿನಲ್ಲಿರುವ ಅವಕಾಶ ಮತ್ತು ತೊಡಕುಗಳ ಕುರಿತು ಒಂದು ತಿಂಗಳು ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ಸೂಚನೆ ನೀಡಿದೆ.
ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ರಾಜ್ಯಾದ್ಯಂತ ಹೋರಾಟ ನಡೆಯುತ್ತಿವೆ. ಲಿಂಗಾಯತ ಮತ್ತು ವೀರಶೈವ ಪ್ರತ್ಯೇಕ ಎಂಬ ವಾದ ಆರಂಭವಾಗಿರುವುದರಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಗೊಂದಲ ಉಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಗೊಂದಲ ನಿವಾರಣೆಗೆ ತಜ್ಞರ ಸಮಿತಿ ರಚಿಸಿದ್ದು, ತಜ್ಞರ ಸಮಿತಿ ವರದಿ ಬಂದ ನಂತರ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ.
ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವ ಕುರಿತಂತೆ ವರದಿ ನೀಡಲು ರಾಜ್ಯ ಸರ್ಕಾರ ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಸೂಚನೆ ನೀಡಿತ್ತು. ಆದರೆ, ಎರಡೂ ಇಲಾಖೆಗಳು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಇದರಿಂದ ಹಿಂದೆ ಸರಿದಿದ್ದವು.