ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಮಾ. 23ರಂದು ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಒಂದು ಸ್ಥಾನ ಬಿಟ್ಟುಕೊಡುವ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ದೇವೇಗೌಡರು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿ, ಒಂದು ಸ್ಥಾನ ಬಿಟ್ಟುಕೊಡುವಂತೆ ಕೇಳಿದ್ದಾರೆಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಂದ ಮತ್ತೂಮ್ಮೆ ಅಭಿಪ್ರಾಯ ಪಡೆದಿದ್ದು, ಇಬ್ಬರೂ ನಾಯಕರು ಜೆಡಿಎಸ್ ಜತೆ
ಹೊಂದಾಣಿಕೆ ಇಲ್ಲದೇ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಹಾಗೂ ಪರಮೇಶ್ವರ್ ಹೊರತು ಪಡಿಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಸೇರಿ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಪಕ್ಷದ ಭವಿಷ್ಯದ ದೃಷ್ಟಿಯಿಂದ ರಾಜ್ಯಸಭೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ವಿದೇಶ ಪ್ರವಾಸದಿಂದ ವಾಪಸ್ ಆದ ನಂತರ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದು, ಭಾನುವಾರ ಸಂಜೆ ಹೊತ್ತಿಗೆ ಕಾಂಗ್ರೆಸ್ ಅಭ್ಯರ್ಥಿಗಳ
ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.