ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್‌ನಿಂದ ಪ್ರಮುಖವಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಚಾರಕ್ಕೆಂದು ರಾಜ್ಯಕ್ಕೆ ಬರಲಿದ್ದಾರೆ. ಇನ್ನು ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ: ದಕ್ಷಿಣ ಭಾರತ ಹಾಗೂ ಬಾಲಿವುಡ್ ನಟರಾದ ಚಿರಂಜೀವಿ, ಖುಷೂº, ನಗ್ಮಾ, ರಾಜ್ ಬಬ್ಬರ್, ನಟಿ ಮಾಲಾಶ್ರೀ, ರಮ್ಯಾ, ಅಂಬರೀಶ್ ಸೇರಿದಂತೆ ಸಿನಿಮಾ ನಟರ ದಂಡು ಕಾಂಗ್ರೆಸ್ ಪಕ್ಷದ ಪರವಾಗಿ ಸ್ಟಾರ್ ಪ್ರಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಇವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ, ಅಶೋಕ್ ಚೌಹಾಣ್, ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಅಶೋಕ್ ಗೆಹೊಟ್, ನವಜೋತ್ ಸಿಂಗ್ ಸಿದ್ದು, ಸುಶೀಲ್ ಕುಮಾರ್ ಸಿಂಧೆ, ಯುವ ನಾಯಕರಾದ ಜೋತಿರಾಧಿತ್ಯ ಸಿಂಧಿಯಾ, ಸಚಿನ್ ಪೈಲೆಟ್, ಮೊಹಮದ್ ಅಜರುದ್ಧೀನ್, ಸುಷ್ಮಿತಾ ದೇವ್, ಪ್ರಿಯಾ ದತ್, ಅಮಿತ್ ದೇಶಮುಖ್, ಶಶಿ ತರೂರ್ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇವರೊಂದಿಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್, ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನೂ ಪ್ರಚಾರಕ್ಕೆ ಕರೆತರಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ.